ADVERTISEMENT

ಪೌರಾಡಳಿತಕ್ಕೆ ನಿರೀಕ್ಷೆಗೂ ಮೀರಿ ಅನುದಾನ

3 ಸಾವಿರ ವಿವಿಧ ಹುದ್ದೆಗಳ ಭರ್ತಿ ಮಾಡಲಾಗುವುದು: ಸಚಿವ ಖಂಡ್ರೆ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 9:27 IST
Last Updated 13 ಮಾರ್ಚ್ 2018, 9:27 IST
ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. ಸಚಿವ ಪ್ರಮೋದ್ ಮಧ್ವರಾಜ್ ಇದ್ದಾರೆ. ಪ್ರಜಾವಾಣಿ ಚಿತ್ರ
ಪೌರಾಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. ಸಚಿವ ಪ್ರಮೋದ್ ಮಧ್ವರಾಜ್ ಇದ್ದಾರೆ. ಪ್ರಜಾವಾಣಿ ಚಿತ್ರ   

ಪಡುಬಿದ್ರಿ: ರಾಜ್ಯ ಸರ್ಕಾರ ಪೌರಾಡಳಿತಕ್ಕೆ ನಿರೀಕ್ಷೆಗೂ ಮೀರಿ ಅನುದಾನ ನೀಡಿದ್ದು, ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕಾದ ಹೊಣೆ ಪೌರಾಡಳಿತ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮೇಲಿದೆ ಎಂದು ಪೌರಾಡಳಿತ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಶುಕ್ರವಾರ ಕಾಪು ಪುರಸಭೆ ವ್ಯಾಪ್ತಿ ಯಲ್ಲಿ ಸರ್ಕಾರದ ಅನುದಾನದಿಂದ ಕೈಗೊಂಡ ವಿವಿಧ ಅಭಿವೃದ್ಧಿ ಕಾಮ ಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ₹3 ಸಾವಿರ ಕೋಟಿ ಅನುದಾನವನ್ನು ನಗರೋತ್ಥಾನದ ಮೂಲಕ ಪೌರಾಡಳಿತಕ್ಕೆ ನೀಡಿದೆ. ಅಮೃತ್ ಯೋಜನೆ ಅಡಿ ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಅನುದಾನ ನೀಡಿದೆ. ಒಳಚರಂಡಿ, ಶುದ್ಧಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ ಒದಗಿಸಿದೆ. ಸ್ವಚ್ಛ ಭಾರತ ಯೋಜನೆ ಅಡಿ ಬಯಲು ಬಹಿರ್ದೆಸೆ ಮುಕ್ತ ಪಟ್ಟಣವಾಗಿಸಲು ಅನುದಾನ ನೀಡಲಾ ಗಿದೆ. ಯೋಜನಾಬದ್ಧ ನಗರಗಳು
ಬೆಳೆಯಬೇಕಾದರೆ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಸಿಗಬೇಕು ಎಂದರು.

ADVERTISEMENT

ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿ, ಕಾಪು ಪಟ್ಟಣ ಮತ್ತು ಗ್ರಾಮಗಳು ವೇಗವಾಗಿ ಅಭಿವೃದ್ಧಿ ಹೊಂದಲು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದರು.

ಉದ್ಘಾಟನೆ, ಗುದ್ದಲಿಪೂಜೆ: ಕಾಪು ಪುರಸಭಾ ವ್ಯಾಪ್ತಿಯ ₹130 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾ ಟನೆ ಹಾಗೂ ₹8.50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆಯನ್ನು ಸಚಿವರು ನೆರವೇರಿಸಿದರು. ಡಾ. ಪ್ರಭಾಕರ ಶೆಟ್ಟಿ ಮನೆಯಿಂದ ಫಕೀರ್ಣಕಟ್ಟೆ ರಸ್ತೆ ಅಭಿವೃದ್ಧಿ, ಮಲ್ಲಾರು ಕೋಟೆ ರಸ್ತೆ ಅಭಿವೃದ್ಧಿ, ಫಕೀರ್ಣಕಟ್ಟೆ ಸ್ಮಶಾನ ಉದ್ಘಾಟನೆ, ಕಾಪು ಮೀನು ಮಾರುಕಟ್ಟೆ ಅಭಿವೃದ್ಧಿಗೆ ಶಿಲಾನ್ಯಾಸ, ಪಡು ಗ್ರಾಮದ ಮಮ್ಮುಕೆರೆ ಅಭಿ ವೃದ್ಧಿ ಉದ್ಘಾಟನೆ, ಭಟ್ರತೋಟ ಸೇತುವೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಪುರಸಭಾ ವ್ಯಾಪ್ತಿಯ ಜನತೆಗೆ ಹಕ್ಕುಪತ್ರಗಳನ್ನು ಹಾಗೂ ಕ್ರೀಡಾ ಇಲಾಖೆಯಿಂದ ವಿವಿಧ ಸಂಘ ಸಂಸ್ಥೆಗಳಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಲಾಯಿತು.

ಶಾಸಕ ವಿನಯಕುಮಾರ್ ಸೊರಕೆ, ಪುರಸಭೆ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್, ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ವಿರೋಧಪಕ್ಷದ ನಾಯಕ ಅರುಣ್ ಶೆಟ್ಟಿ, ಮುಖ್ಯಾಧಿಕಾರಿ ರಾಯಪ್ಪ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿವಾಕರ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಜೆ. ಶೆಟ್ಟಿ ಇದ್ದರು.

ಕೆಪಿಎಸ್‌ಸಿಗೆ ಪತ್ರ: ಸಚಿವ
ಉಡುಪಿ: ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ 3 ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರ ವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡರೆ ಸಿಬ್ಬಂದಿ ಕೊರತೆ ನೀಗಲಿದೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಎಲ್‌ಇಡಿ ಬಳಕೆಯಿಂದ ಶೇ 70ರಷ್ಟು ವಿದ್ಯುತ್ ಬಿಲ್ ಉಳಿತಾಯವಾಗಲಿದೆ ಎಂದು ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಅಮೃತ್ ಯೋಜನೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆದಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು. ನಗರೋತ್ಥಾನ 3ನೇ ಹಂತದ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಿಸಿ, ವಿವಿಧ ಯೋಜ ನೆಯಲ್ಲಿ ಕೈಗೊಳ್ಳುವ ಕಾಮಗಾರಿಗಳನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿ ಎಂದು ತಾಕೀತು ಮಾಡಿದರು.

ಪೌರಕಾರ್ಮಿಕರಿಗೆ ದೊರೆಯ ಬೇಕಾದ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಿ. ಸಾರ್ವಜನಿರಿಗೆ ಎಲ್ಲ ರೀತಿಯ ಸೇವೆಗಳನ್ನು ಶೀಘ್ರವಾಗಿ ನೀಡಿ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥ ಗೊಳಿಸಲು ಪ್ರಯತ್ನಿಸಿ ಎಂದರು.

ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನಿಸ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅರುಣಪ್ರಭ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.