
ಮರವಂತೆ (ಬೈಂದೂರು): ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜೇತರಾದ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗ ಸ್ಪಂದಿಸುತ್ತ ಗ್ರಾಮದ ಅಭಿವೃದ್ಧಿ ಸಾಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಇಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಕಳೆದ ಚುನಾವಣೆಯಲ್ಲಿ ಮರವಂತೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಸದಸ್ಯರನ್ನು ಅಭಿನಂದಿಸಲು ಈಚೆಗೆ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತಿನಿಧನಿಗಳ ಮೇಲೆ ವಿಶ್ವಾಸವಿಟ್ಟು ಮತದಾರರು ಗೆಲ್ಲಿಸಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಮ್ಮ ಗ್ರಾಮವನ್ನು ಮಾದರಿ ಗ್ರಾಮ ಮಾಡಲು ಪಣತೊಡಬೇಕು ಎಂದರು.
ಪಕ್ಷದ ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಗ್ರಾಮದ ಜನರು ಸದಸ್ಯರ ನಡವಳಿಕೆಯ ಮೇಲೆ ಸದಾ ಕಣ್ಣಿಟ್ಟಿ ರುತ್ತಾರೆ. ಅವರು ಎಚ್ಚರದಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಕಾಮಗಾರಿಯ ಗುಣಮಟ್ಟದ ಕುರಿತು ನಿಗಾವಹಿಸಬೇಕು. ದುಂದುವೆಚ್ಚಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಬಾಬು ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ನರಸಿಂಹ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.