ADVERTISEMENT

ಬಂದ್ ಕರೆಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2012, 8:55 IST
Last Updated 7 ಅಕ್ಟೋಬರ್ 2012, 8:55 IST

ಉಡುಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಂದ್ ಬೆಂಬಲಿಸಿ ಕೆಲ ಸಂಘಟನೆಗಳು ಬೀದಿಗಳಿದು ಹೋರಾಟ ಮಾಡಿದವು. ರಸ್ತೆ ತಡೆ, ರ‌್ಯಾಲಿ ಸಹ ನಡೆಯಿತು. ಆದರೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು. ಖಾಸಗಿ ಬಸ್ ಸಂಚಾರವೂ ಸಹಜವಾಗಿತ್ತು. ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರದ ಮೇಲೂ ಅಂತಹ ಪರಿಣಾಮ ಬೀರಲಿಲ್ಲ. ಆದರೆ ಜನ ದಟ್ಟಣೆ ಎಂದಿನಂತೆ ಇರಲಿಲ್ಲ. ನಗರದಲ್ಲಿ ಜನರ ಓಡಾಟ ಸ್ವಲ್ಪ ಕಡಿಮೆ ಇತ್ತು. ಬಸ್‌ಗಳು ಸಂಚರಿಸಿದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ರಾಜ್ಯ ರೈತ ಸಂಘ, ಜಯ ಕರ್ನಾಟಕ ಸಂಘಟನೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಘಟನೆ ಸದಸ್ಯರು ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಜಂಕ್ಷನ್ ಬಳಿ ಸುಮಾರು ಹದಿನೈದು ನಿಮಿಷಗಳ ಕಾಲ ರಸ್ತೆ ತಡೆ ನಡೆಸಿದರು. ಟೈರ್‌ಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

`ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಕಾವೇರಿ ನದಿ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿವೆ. ನಮ್ಮ ರೈತರಿಗೇ ವ್ಯವಸಾಯಕ್ಕೆ ನೀರಿಲ್ಲ. ಕುಡಿಯುವ ನೀರಿಗೂ ಪರಿತಪಿಸುವಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಪ್ರಧಾನಿ ಹೇಳಿರುವುದು ಸರಿಯಲ್ಲ~ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ವಿಜಯ್ ಕುಮಾರ್ ಹೆಗ್ಡೆ ಮತ್ತು ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ದಿವಾಕರ ಶೆಟ್ಟಿ ಹೇಳಿದರು.

`ರಾಜ್ಯ ಸರ್ಕಾರ ಈ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸುವ ಮೂಲಕ ರಾಜ್ಯದ ರೈತರ ಹಿತ ಕಾಪಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ~ ಎಂದು ಅವರು ಎಚ್ಚರಿಕೆ ನೀಡಿದರು. ರಸ್ತೆ ತಡೆ ಮಾಡಿದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಆಗಿತ್ತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ರ‌್ಯಾಲಿ: ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಿ ಸೌತ್ ಕೆನರಾ ಛಾಯಾಗ್ರಾಹಕರ ಸಂಘದ ಉಡುಪಿ ಹಾಗೂ ಕಾಪು ವಲಯದ ಸದಸ್ಯರು ನಗರದ ಗಡಿಯಾರ ಗೋಪುರ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿದ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ವಾಸುದೇವರಾವ್ ಮಾತನಾಡಿ, ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಎಲ್ಲರೂ ವಿರೋಧಿಸಬೇಕಾಗಿದೆ. ನೀರು ಬಿಡಲು ಆದೇಶ ನೀಡಿರುವುದು ರಾಜ್ಯಕ್ಕೆ ಮಾಡಿದ ದ್ರೋಹವಾಗಿದೆ. ಈ ಹೋರಾಟಕ್ಕೆ ಸಂಘಟನೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದರು.
ಗಡಿಯಾರ ವೃತ್ತದಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ‌್ಯಾಲಿ ನಡೆಸಿದ ಸಂಘಟನೆಯ ಸದಸ್ಯರು ಜಿಲ್ಲಾಧಿಕಾರಿ ಡಾ. ಎಂ.ಟಿ. ರೇಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಉಡುಪಿ ವಲಯದ ಅಧ್ಯಕ್ಷ ಸುಂದರ್ ಪೂಜಾರಿ, ಕಾಪು ವಲಯದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಜಂಟಿ ಕಾರ್ಯದರ್ಶಿ ಜನಾರ್ದನ ಕೊಡವೂರು, ರತನ್ ಕುಮಾರ್, ರಾಘವ ಪದ್ಮಶಾಲಿ, ಶಿವ ಅಮೀನ್, ಪ್ರಮೋದ್, ಪ್ರವೀಣ್ ಮತ್ತಿತರರು ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.