ಉಡುಪಿ: ‘ಅಡಿಕೆ ಬೆಳೆಯನ್ನು ನಿಷೇಧಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅಡಿಕೆಯಲ್ಲಿ ಹಾನಿಕಾರಕ ಅಂಶಗಳು ಇರುವ ಬಗ್ಗೆ ಸಾಲಿಸಿಟರ್ ಜನರಲ್ ಅವರು ಸರ್ಕಾರದ ಗಮನಕ್ಕೆ ತರದೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಈಗ ಮತ್ತೆ ಹೊಸದಾಗಿ ಅಫಿಡವಿಟ್ ಸಲ್ಲಿಸಲಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಮೂರನೇ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಗುಲಾಂನಬಿ ಆಜಾದ್ ಅವರಿಗೆ ವಾಸ್ತವ ವಿಷಯಗಳನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಶಿವಮೊಗ್ಗ ಆಗುಂಬೆ ಉಡುಪಿ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ. ಘಾಟಿಯಲ್ಲಿ ದೊಡ್ಡ ವಾಹನಗಳು ಸಂಚರಿಸಲು ಅನುಕೂಲವಾಗುವಂತೆ ರಸ್ತೆಯನ್ನು ನಿರ್ಮಿಸಲು 40 ಕೋಟಿ ರೂಪಾಯಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಒಪ್ಪಿಕೊಂಡಿದ್ದಾರೆ. ಈ ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಈಗಾಗಲೇ 12 ಕೋಟಿ ರೂಪಾಯಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಕಾರ್ಖಾನೆ ವಿಷಯದಲ್ಲಿ ಮುಂದೆ ಏನು ಮಾಡುಬೇಕು ಎಂದಬುವುದರ ಬಗ್ಗೆ ಕುಂದಾಪುರದಲ್ಲಿ ನಡೆಯುವ ಕೃಷಿ ಮೇಳದಲ್ಲಿ ರೈತರಿಂದ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ವಾರಾಹಿ ಎಡದಂಡೆ ನಾಲೆ ಮೂಲಕ 8 ಸಾವಿರ ಎಕರೆ ಪ್ರದೇಶಕ್ಕೆ ನೀರು ಹರಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ. ಕೆಲವು ತೊಂದರೆ ನಿವಾರಿಸಿಕೊಳ್ಳಲು ಅರಣ್ಯ ಮತ್ತು ನೀರಾವರಿ ಇಲಾಖೆಯ ಜೊತೆ ಮಾತನಾಡಲಾಗಿದೆ ಎಂದು ಹೇಳಿದರು.
ಅಡಿಕೆ ಹಾನಿಗೆ ಈಗಾಗಲೇ ಜಿಲ್ಲೆಯಲ್ಲಿ 6.50 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮೂಲಕ ರಾಜ್ಯಕ್ಕೆ 170 ಕೋಟಿ ರೂಪಾಯಿ ಅನುದಾನ ಬರುವ ನಿರೀಕ್ಷೆ ಇದೆ. ಈಗಾಗಲೇ ಜಿಲ್ಲೆಯಲ್ಲಿ ವಸತಿ ರಹಿತರಿಗೆ 822 ನಿವೇಶನ ಮಂಜೂರು ಮಾಡಲಾಗಿದೆ. ಅರ್ಹರಿಗೆ ನಿವೇಶನ ನೀಡಲು ಉಡುಪಿ ತಾಲ್ಲೂಕಿನಲ್ಲಿ 47 ಎಕರೆ, ಕುಂದಾಪುರದಲ್ಲಿ 36 ಎಕರೆ ಮತ್ತು ಕಾರ್ಕಳದಲ್ಲಿ 8 ಎಕರೆ ಜಮೀನು ಗುರುತಿಸಲಾಗಿದೆ ಎಂದು ಸೊರಕೆ ಹೇಳಿದರು.
ರಾಜ್ಯದಲ್ಲಿ ಏಕರೂಪ ಮರಳು ನೀತಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಆದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಈ ನೀತಿಯಲ್ಲಿ ಕೆಲವೊಂದು ವಿನಾಯಿತಿ ಕೇಳಲಾಗಿದೆ. ಈ ಮೂರೂ ಜಿಲ್ಲೆಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲಾಗುತ್ತಿದೆ, ಯಂತ್ರಗಳನ್ನು ಬಳಸುತ್ತಿಲ್ಲ ಎಂದರು.
ಮುಂದಿನ ತಿಂಗಳಿನಿಂದ ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕುಚ್ಚಲಕ್ಕಿ ನೀಡಲಾಗುತ್ತದೆ. ಬೆಳ್ತಕ್ಕಿ ಬೇಕಾದರೆ ಅದನ್ನೇ ಪಡೆಯಬಹುದು ಎಂದರು.
ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಡಿಸೆಂಬರ್ 27ರಿಂದ 29ರ ವರೆಗೆ ಆಯೋಜಿಸಿರುವ ‘ಉಡುಪಿ 360’ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಚಿವರು ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಡಾ. ಎಂ.ಟಿ. ರೇಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಎ. ಪ್ರಭಾಕರ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.