ADVERTISEMENT

ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ

ಸ್ಥಳ ಪರಿಶೀಲನೆ ನಡೆಸಿದ ಶಾಸಕ ರಘುಪತಿ ಭಟ್‌

​ಪ್ರಜಾವಾಣಿ ವಾರ್ತೆ
Published 4 ಮೇ 2021, 16:12 IST
Last Updated 4 ಮೇ 2021, 16:12 IST
ಮಂಗಳವಾರ ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್‌ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು.
ಮಂಗಳವಾರ ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್‌ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದರು.   

ಉಡುಪಿ: ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಜಿ.ಜಗದೀಶ್‌ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಥಳ ವೀಕ್ಷಣೆ ಮಾಡಿದ ಶಾಸಕರು, ‘100 ಸಿಲಿಂಡರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಆಮ್ಲಜನಕ ಜನರೇಟರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. 1 ತಿಂಗಳೊಳಗೆ ನೂತನ ಘಟಕ ಕಾರ್ಯಾರಂಭ ಮಾಡಲಿದೆ’ ಎಂದರು.

ಜಿಲ್ಲೆಯಲ್ಲಿ ಆಮ್ಲಜನಕ ಕೊರತೆಯಾಗುತ್ತಿದ್ದು, ಕೈಗಾರಿಕೋದ್ಯಮಿಗಳು ಉದ್ಯಮಕ್ಕೆ ಬಳಕೆ ಮಾಡುತ್ತಿರುವ ಸ್ವಂತ ಸಿಲಿಂಡರ್‌ಗಳನ್ನು ಏಜೆನ್ಸಿಗಳಿಗೆ ಮರಳಿಸಬೇಕು. ಕೈಗಾರಿಕಾ ಸಿಲಿಂಡರ್‌ಗಳನ್ನು ವೈದ್ಯಕೀಯ ಸಿಲಿಂಡರ್‌ಗಳನ್ನಾಗಿ ಬದಲಿಸಿ ಸೋಂಕಿತರಿಗೆ ಚಿಕಿತ್ಸೆಗೆ ಬಳಸಲುನೆರವಾಗುತ್ತದೆ. ತಿಂಗಳ ಮಟ್ಟಿಗೆ ಕೈಗಾರಿಕೋದ್ಯಮಿಗಳು ಸಹಕಾರ ನೀಡಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.

ADVERTISEMENT

ಆಮ್ಲಜನಕ ವ್ಯವಸ್ಥೆಗೆ ಜಿಲ್ಲಾಡಳಿತ ಕೂಡ ಶ್ರಮಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರ ಪ್ರಯತ್ನದಿಂದ ಜಿಲ್ಲೆಗೆ ಅಗತ್ಯ ಪ್ರಮಾಣದ ಆಮ್ಲಜನಕ ಬಂದಿದೆ. ತುರ್ತಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆಯ ಬೆಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಸಂಪೂರ್ಣ ಮೀಸಲಿಡಲಾಗುವುದು ಎಂದರು.

ಜಿಲ್ಲಾ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಸಂಖ್ಯೆಯನ್ನು 10 ರಿಂದ 20ಕ್ಕೆ ಹೆಚ್ಚಿಸಲಾಗುವುದು. ಜತೆಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಕೋವಿಡ್ ಹೊರತಾದ ಇತರೆ ಕಾಯಿಲೆಗಳಿರುವ ರೋಗಿಗಳನ್ನು ಆಯುಷ್ ಆಸ್ಪತ್ರೆ ಹಾಗೂ ಕ್ರೀಡಾ ಹಾಸ್ಟೆಲ್‌ಗೆ ಸ್ಥಳಾಂತರಿಸುವ ಬಗ್ಗೆ ಚರ್ಚೆ ನಡೆದಿದೆ. 120 ಬೆಡ್‌ಗಳನ್ನು ಸೋಂಕಿತರಿಗೆ ಮೀಸಲಿಡುವ ಚಿಂತನೆ ನಡೆದಿದ್ದು, 2 ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಆಮ್ಲಜನಕ ಬೆಡ್‌ಗಳನ್ನು ಕೋವಿಡ್‌ ಚಿಕಿತ್ಸೆಗೆ ಬಳಸುವ ಬಗ್ಗೆ ಚರ್ಚೆ ನಡೆದಿದೆ. ಕುಂದಾಪುರ, ಕಾಪು, ಕಾರ್ಕಳ ಸರ್ಕಾರಿ ಆಸ್ಪತ್ರೆಗಳಲ್ಲೂ ಆಮ್ಲಜನಕ ವ್ಯವಸ್ಥೆಯ ಬೆಡ್‌ಗಳನ್ನು ಹೆಚ್ಚಿಸಲು ಅಲ್ಲಿನ ಜನಪ್ರತಿನಿಧಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.

ಲಸಿಕೆ ಕೊರತೆ:

ಜಿಲ್ಲೆಯಲ್ಲಿ ಕೋವಿಡ್ ಲಸಿಕೆಗಳ ಕೊರತೆ ಇದೆ. ಲಸಿಕೆ ಲಭ್ಯವಿದ್ದಾಗ ಪಡೆಯಲು ಹಿಂದೇಟು ಹಾಕಿದವರು ಈಗ ಮುಗಿಬಿದ್ದಿರುವುದರಿಂದ ಸಮಸ್ಯೆ ಹೆಚ್ಚಾಗಿದೆ. ನಾಗರಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಶಾಸಕ ರಘುಪತಿ ಭಟ್ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.