ADVERTISEMENT

`13.69 ಕೋಟಿ ವೆಚ್ಚದಲ್ಲಿ ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ'

​ಪ್ರಜಾವಾಣಿ ವಾರ್ತೆ
Published 29 ಜುಲೈ 2013, 9:55 IST
Last Updated 29 ಜುಲೈ 2013, 9:55 IST

ಉಡುಪಿ: `ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 13.69 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ. ನಬಾರ್ಡ್ ಇದಕ್ಕಾಗಿ ಹಣವನ್ನು ಬಿಡುಗಡೆ ಮಾಡಿದೆ' ಎಂದು ಶಾಸಕ ಪ್ರಮೋದ್ ಮಧ್ವರಾಜ್ ಹೇಳಿದರು.

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಎಚ್‌ಐವಿ ರೋಗಾಣು ರೋಗ ನಿರೋಧಕ ಕೇಂದ್ರ (ಎಆರ್‌ಟಿ ಪ್ಲಸ್) ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
 
ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ರೂಪಿಸುವ ಕುರಿತು  ಆರೋಗ್ಯ ಸಚಿವ ಯು.ಟಿ. ಖಾದರ್, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಜೊತೆ ಮಾತುಕತೆ ನಡೆಸಲಾಗಿದೆ. ನಿಮ್ಹಾನ್ಸ್, ಜಯದೇವ ಹೃದ್ರೋಗ ಆಸ್ಪತ್ರೆ ಜೊತೆ ಒಪ್ಪಂದ ಮಾಡಿಕೊಳ್ಳುವ ಆಲೋಚನೆಯೂ ಇದೆ ಎಂದು ಅವರು ತಿಳಿಸಿದರು.

ಎಚ್‌ಐವಿ ಪೀಡಿತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ. ಎಆರ್‌ಟಿ ಪ್ಲಸ್ ಕೇಂದ್ರಕ್ಕೆ ಅಗತ್ಯ ಇರುವ ಸಾಮಗ್ರಿಗಳನ್ನು ಖರೀದಿಸಲು 3.75 ಲಕ್ಷ ರೂಪಾಯಿಯ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ಮೊತ್ತವನ್ನು ಶಾಸಕರ ನಿಧಿಯಿಂದ ನೀಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಜಿಲ್ಲಾಸ್ಪತ್ರೆಗೆ ತಜ್ಞ ವೈದ್ಯರ ಕೊರತೆ ಇದೆ. ಉಡುಪಿ ಮಾತ್ರವಲ್ಲದೆ ರಾಜ್ಯದಾದ್ಯಂತ ತಜ್ಞರ ಕೊರತೆ ಇದೆ. ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಮೀಸಲಾತಿ ನೀಡಬೇಕಾಗಿರುವುದರಿಂದ ವೈದ್ಯರ ನೇಮಕಾತಿ ಪ್ರಕ್ರಿಯೆ ವಿಳಂಬ ಆಗುತ್ತಿದೆ. ಅಲ್ಲದೆ ತಿಂಗಳಿಗೆ 60 ಸಾವಿರ ರೂಪಾಯಿ ಸಂಬಳ ನೀಡುವುದಾಗಿ ಹೇಳಿದರೂ ವೈದ್ಯರು ಸಿಗುತ್ತಿಲ್ಲ ಎಂದು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಮತ್ತು ಸುಟ್ಟು ಗಾಯಗಳಿಂದ ದಾಖಲಾಗುವವರಿಗೆ ಪ್ರತ್ಯೇಕ ವಿಭಾಗ ತೆರೆಯಲಾಗುತ್ತದೆ. ಎಚ್‌ಐವಿಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ವ್ಯವಸ್ಥೆ ಈ ಭಾಗದ ಪ್ರತಿಷ್ಠಿತ ಆಸ್ಪತ್ರೆಗಳಲ್ಲೇ ಇಲ್ಲ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಎಆರ್‌ಟಿ ಪ್ಲಸ್ ಕೇಂದ್ರ ಆರಂಭವಾಗಿರುವುದು ಹೆಮ್ಮೆ ವಿಷಯ. ಇದರಿಂದ ಎಚ್‌ಐವಿ ಪೀಡಿತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಟಿ. ರೇಜು ಹೇಳಿದರು.

ಐವತ್ತೈದು ಲಕ್ಷ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿಕೊಟ್ಟ ಡಾ. ಜಿ. ಶಂಕರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ ಪ್ರಭಾಕರ ಶರ್ಮ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ, ಜಿಲ್ಲಾ ಸರ್ಜನ್ ಆನಂದ್ ನಾಯ್ಕ, ಆಸ್ಪತ್ರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಗಳ ರಬೀಂದರ ನಾಯಕ್  ಉಪಸ್ಥಿತರಿದ್ದರು.

108 ಸಮಸ್ಯೆ ಇಲ್ಲ: 108 ಅಂಬುಲೆನ್ಸ್ ನೌಕರರು ಮುಷ್ಕರ ನಡೆಸುತ್ತಿದ್ದರೂ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ಜಿಲ್ಲೆಯಲ್ಲಿ ಹನ್ನೊಂದು 108 ಅಂಬುಲೆನ್ಸ್‌ಗಳಿವೆ. ಆರೋಗ್ಯ ಇಲಾಖೆಯ 22 ಮಂದಿ ಚಾಲಕರನ್ನು ಈ ವಾಹನಗಳಿಗೆ ನಿಯೋಜಿಸಲಾಗಿದೆ. ಎರಡು ಪಾಳಿಯಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.