ADVERTISEMENT

ದೀಪಕ್ ರಾವ್ ಹತ್ಯೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2018, 6:14 IST
Last Updated 6 ಜನವರಿ 2018, 6:14 IST

ಉಡುಪಿ: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆ ತಡೆ ಮಾಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಿರಂತರವಾಗಿ ನಡೆಯುತ್ತಿದ್ದರೂ ಅದನ್ನು ತಡೆಯಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪಾಪುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟಕ ಫೋರಂ ಫಾರ್ ಡಿಗ್ನಿಟಿ ಸಂಘಟನೆಯ ಕಾರ್ಯಕರ್ತರು ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕೂಡಲೇ ಆ ಸಂಘಟನೆಗಳನ್ನು ನಿಷೇಧಿಸಿ ಎಂದು ಹಲವು ತಿಂಗಳುಗಳಿಂದ ಮನವಿ ಮಾಡಲಾಗುತ್ತಿದೆ. ಆದರೆ ಸರ್ಕಾರ ಮಾತ್ರ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಿಎಫ್‌ಐ ಮತ್ತು ಕೆಎಫ್‌ಡಿ ಸಂಘಟನೆಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸಿದ್ದರಾಮಯ್ಯ ಅವರ ಹಿಂದಕ್ಕೆ ಪಡೆದರು. ಏನೇ ಕೃತ್ಯ ಎಸಗಿದರೂ ಕಾನೂನಿನಿಂದ ಪಾರಾಗಬಹುದು ಎಂಬ ಮನೋಭಾವನೆ ಬೆಳೆದಿದೆ. ಆದ್ದರಿಂದ ಎಲ್ಲ ಕೊಲೆಗಳ ಹೊಣೆಯನ್ನು ಸರ್ಕಾರವೇ ಹೊರಬೇಕು.

ADVERTISEMENT

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹತ್ಯೆಗಳ ಸರಣಿ ಮುಂದುವರೆದಿದೆ. ಜನರೇ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವರು ಎಂದು ಪ್ರತಿಭನಾಕಾರರರು ಹೇಳಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಅವರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಬಿಜೆಪಿ ಮುಖಂಡರಾದ ಸುಪ್ರಸಾದ ಶೆಟ್ಟಿ,ಕುಯಿಲಾಡಿ ಸುರೇಶ್ ನಾಯಕ್, ಶ್ರೀಶ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.