ಉಡುಪಿ: ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಎಂದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಆಧಾರ್ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಧಾರ್ ಜೊತೆ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಕೊಳ್ಳದ ಪ್ರತಿಯೊಬ್ಬರೂ ಶೀಘ್ರ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯ 15 ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್‌ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ ಸಕ್ರಿಯ ಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕ್ರಿಯಗೊಳ್ಳಲಿದೆ. ಪ್ರಸ್ತುತ 41,115 ಯುವಜನರ ಬಯೋಮೆಟ್ರಿಕ್ ನೀಡುವುದು ಬಾಕಿ ಇದೆ ಇದರಿಂದ ಭವಿಷ್ಯದಲ್ಲಿ ಯಾವುದೇ ಪರೀಕ್ಷೆಗಳನ್ನು ಬರೆಯಲು ತೊಂದರೆಯಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ ಪೋಷಣ್ ಟ್ರ್ಯಾಕರ್ ಮೂಲಕ 45,832 ಮಕ್ಕಳು ದಾಖಲಾಗಿದ್ದು, ಅವರಲ್ಲಿ 33,425 ಮಕ್ಕಳು ಆಧಾರ್ ಕಾರ್ಡ್ ಹೊಂದಿದ್ದಾರೆ. ಬಾಕಿ ಉಳಿದ 11,947 ಮಕ್ಕಳಿಗೂ ಆಧಾರ್ ಮಾಡಿಸುವುದು ಅವಶ್ಯ. ತಮ್ಮ ಹತ್ತಿರದ ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ನೋಂದಣಿ ಮಾಡಿಸಬೇಕು ಎಂದರು.
ಜನನ ಪ್ರಮಾಣ ಪತ್ರ ಹಾಗೂ ಶಾಲೆಯ ದಾಖಲೆಗಳಲ್ಲಿ ಹೆಸರು ಬದಲಾವಣೆ ಕಾರಣ ಕೆಲವು ವಿದ್ಯಾರ್ಥಿಗಳು, ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರು ಹಾಗೂ ಹಾಸಿಗೆ ಹಿಡಿದ ಕೆಲವು ಅಂಗವಿಕಲರಿಗೆ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಸಮಸ್ಯೆ ಉಂಟಾಗುತ್ತಿದೆ. ಅವರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಅವರಿಗೂ ಸಹ ಆಧಾರ್ ಕಾರ್ಡ್ ಪಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯು.ಐ.ಡಿ.ಎ.ಐ. ಉಪನಿರ್ದೇಶಕ ಗುಲ್ಶನ್ ಕುಮಾರ್ ಸಿಂಗ್, ಅಸಿಸ್ಟೆಂಟ್ ಮ್ಯಾನೇಜರ್ ಮೊಹಮ್ಮದ್ ಮೂಸಾಬ್ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಇದ್ದರು.
ಜಿಲ್ಲೆಯಲ್ಲಿ ಈವರೆಗೆ 1411209 ಮಂದಿ ಆಧಾರ್ ಕಾರ್ಡ್ ಅನ್ನು ಹೊಂದಿದ್ದು ಅವರಲ್ಲಿ 1342275 ಮಂದಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಜೊತೆ ನೋಂದಾಯಿಸಿಕೊಂಡಿದ್ದಾರೆ.– ಸ್ವರೂಪ ಟಿ.ಕೆ., ಜಿಲ್ಲಾಧಿಕಾರಿ
‘ನಕಲಿ ಆಧಾರ್ ಬಗ್ಗೆ ಎಚ್ಚರ ವಹಿಸಿ’
ಹೊರ ರಾಜ್ಯ ಹಾಗೂ ವಿದೇಶಗಳಿಂದ ಬಂದಿರುವವರು ಸಹ ಸುಳ್ಳು ದಾಖಲೆಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆ ಕ್ಯೂಆರ್ ಕೋಡ್ ಅನ್ನು ಪರಿಶೀಲಿಸುವುದರೊಂದಿಗೆ ಆಧಾರ್ ಕಾರ್ಡ್‌ನ ನೈಜತೆ ಪರಿಶೀಲಿಸಬೇಕು. ಸುಳ್ಳು ದಾಖಲೆಗಳನ್ನು ನೀಡಿ ಆಧಾರ್ ಕಾರ್ಡ್ ಪಡೆಯಲು ಮುಂದಾದರೆ ಹಾಗೂ ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.