
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ಅವರಿಗೆ ರಕ್ಷಣೆ ನೀಡಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣುಮಕ್ಕಳಲ್ಲಿ ಸುರಕ್ಷತಾ ಭಾವ ಮೂಡಿಸಲಿದೆ ಎಂದರು.
ವಾಹನದಲ್ಲಿ 4 ಜನ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯ ಒಬ್ಬ ಚಾಲಕ ಇರಲಿದ್ದಾರೆ., ಅವರು ಎರಡು ಪಾಳಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ತರಬೇತಿ ಹೊಂದಿದ ಅಕ್ಕಪಡೆಯ ಸದಸ್ಯರು ಶಾಲಾ-ಕಾಲೇಜು, ಬಸ್ ನಿಲ್ದಾಣ, ದೇವಸ್ಥಾನ, ಹಾಸ್ಟೆಲ್‌ಗಳು, ಜನದಟ್ಟಣೆ ಪ್ರದೇಶಗಳಲ್ಲಿ ಗಸ್ತು ತಿರುಗಲಿದ್ದಾರೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ದೌರ್ಜನ್ಯ, ಹಿಂಸೆ, ಶೋಷಣೆ ಎದುರಿಸುತ್ತಿರುವ ಮಹಿಳೆಯರು ಹಾಗೂ ಮಕ್ಕಳಿಗೆ ಸಹಾಯಹಸ್ತ ಒದಗಿಸುವುದರೊಂದಿಗೆ ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಅಕ್ಕಪಡೆ ಒತ್ತು ನೀಡಲಿದೆ ಎಂದು ವಿವರಿಸಿದರು.
ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸುವ, ಸ್ವರಕ್ಷಣೆ ಕಾರ್ಯವಿಧಾನ, ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸುವ ಬಗ್ಗೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಕ್ಕ ಪಡೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.
ಪ್ರಾಯೋಗಿಕವಾಗಿ ಅಕ್ಕಪಡೆಯನ್ನು ಮಲ್ಪೆ ಮತ್ತು ಮಣಿಪಾಲದಲ್ಲಿ ನಿಯೋಜಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರಭಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.