ADVERTISEMENT

ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ: ಅಂಗಾರ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 16:28 IST
Last Updated 10 ಆಗಸ್ಟ್ 2022, 16:28 IST
ಎಸ್.ಅಂಗಾರ
ಎಸ್.ಅಂಗಾರ   

ಉಡುಪಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್‌ ರಾಜಕೀಯ ಲಾಭ ಪಡೆದುಕೊಳ್ಳಲು ಅಪ ಪ್ರಚಾರ ಮಾಡುವ ಮೂಲಕ ಕುತಂತ್ರದ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ವಾಗ್ದಾಳಿ ನಡೆಸಿದರು.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷದಲ್ಲಿಯೇ ಚರ್ಚೆಯಾಗಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅವರೇ ನಾಯಕರು ಎಂದು ಪಕ್ಷವೂ ತೀರ್ಮಾನ ಮಾಡಿದೆ. ವಿರೋಧ ಪಕ್ಷಗಳಿಗೆ ಅಪಪ್ರಚಾರ ಬಿಟ್ಟು ಬೇರೆ ದಾರಿ ಇಲ್ಲವಾಗಿದೆ ಎಂದು ಟೀಕಿಸಿದರು.

ಪಕ್ಷ ಅಧಿಕಾರ ಬದಲಾವಣೆಗೆ ತೀರ್ಮಾನಿಸಿದರೆ ಮಾತ್ರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರೆ. ಸದ್ಯ ಅಂತಹ ಬೆಳವಣಿಗೆಗಳು ನಡೆದಿಲ್ಲ ಎಂದು ಸಚಿವ ಅಂಗಾರ ಪ್ರತಿಕ್ರಿಯಿಸಿದರು.

ADVERTISEMENT

ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ಹತ್ಯೆಯಿಂದ ಸಹಜವಾಗಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿತ್ತು. ಸರ್ಕಾರ ಕಾರ್ಯಕರ್ತರನ್ನು ಕಡೆಗಣಿಸದೆ ಉತ್ತಮ ತೀರ್ಮಾನಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿಗಳು ಒಂದು ವರ್ಷದ ಆಡಳಿತದ ವಿಜಯೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿ, ಬೆಳ್ಳಾರೆಗೆ ಭೇಟಿ ನೀಡಿದ್ದಾರೆ. ಕಾರ್ಯಕರ್ತನನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು.

ಪ್ರವೀಣ್ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿದೆ. ಈಗಾಗಲೇ ಪ್ರಕರಣದಲ್ಲಿ ಹಲವರ ಬಂಧನವಾಗಿದೆ. ಎಲ್ಲ ಆರೋಪಿಗಳನ್ನು ಬಂಧಿಸಲಾಗುತ್ತದೆ. ಪಕ್ಷಕ್ಕೆ ರಾಜೀನಾಮೆ ಕೊಟ್ಟವರು ಮರಳಿ ಬಂದಿದ್ದಾರೆ. ರಾಜೀನಾಮೆ ಪ್ರಹಸನದಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.