ADVERTISEMENT

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಸಚಿವ ಅರವಿಂದ ಲಿಂಬಾವಳಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 14:46 IST
Last Updated 20 ಜುಲೈ 2021, 14:46 IST
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ   

ಉಡುಪಿ: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತದಿಂದ ರೂಪಿಸಿರುವ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋರಿತ್ತು. ಈ ಸಂಬಂಧ ಭಾಷಾ ಸಂಸ್ಥಾನವು ಭಾಷಾ ತಜ್ಞರ ಸಮಿತಿ ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದರು.

ADVERTISEMENT

ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಹರಿಸುವಂತೆ ಸೂಚಿಸಲಾಗಿದೆ. ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದವರಿಗೆ ಅಭಿನಂದನೆ ಸಲ್ಲಿಸುವುದಾಗಿ ಲಿಂಬಾವಳಿ ತಿಳಿಸಿದ್ದಾರೆ.

ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯ, ಪ್ರಚಾರ ಸಾಹಿತ್ಯ ಹೀಗೆ ತುಳು ಲಿಪಿಯು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಸುಧೀರ್ಘ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿರುವ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ಹರ್ಷವಾಗುತ್ತಿದೆ ಎಂದು ಸಂತಸವನ್ನು ಹಂಚಿಕೊಂಡಿದ್ದಾರೆ.

ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆಯ ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ಸರ್ಕಾರದಿಂದ ಸಹಕಾರ ನೀಡಲಾಗುವುದು ಎಂದರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.