ADVERTISEMENT

ಪ್ರಜಾಪ್ರಭುತ್ವದಲ್ಲಿ ಮರೆಯಲಾಗದ ವ್ಯಕ್ತಿತ್ವ: ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ

ಡಾ. ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2022, 14:08 IST
Last Updated 5 ಏಪ್ರಿಲ್ 2022, 14:08 IST
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.
ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.   

ಉಡುಪಿ: ಸಮಾಜದಲ್ಲಿರುವ ಜಾತಿ ಮತ್ತು ವರ್ಗಗಳ ನಡುವಿನ ಅಸಮಾನತೆಯನ್ನು ತೊಡೆದು ಹಾಕಿ ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಬಾಬು ಜಗಜೀವನ ರಾಂ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಅಸಮಾನತೆ ವಿರುದ್ಧ ಹೋರಾಟ ನಡೆಸಿದ ಡಾ.ಬಾಬು ಜಗಜೀವನ ರಾಂ ಕೇಂದ್ರದಲ್ಲಿ ಹಲವು ಇಲಾಖೆಗಳ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದಾರೆ. ಸದಾ ಆಧ್ಯಯನ ಶೀಲತೆಯಿಂದ ಅಪಾರ ಜ್ಞಾನ ಹೊಂದಿದ್ದರು. ಅವರ ಹೋರಾಟ ಹಾಗೂ ಜೀವನದ ಮೌಲ್ಯಗಳು ಪ್ರತಿಯೊಬ್ಬರಿಗೂ ಆದರ್ಶ ಎಂದರು.

ADVERTISEMENT

ಡಾ.ಬಾಬು ಜಗಜೀವನ ರಾಂ ಕುರಿತು ಉಪನ್ಯಾಸ ನೀಡಿದ ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೂವಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಂದಿಗೂ ಮರೆಯದ ಹಾಗೂ ಮರೆಯಬಾರದ ವ್ಯಕ್ತಿತ್ವ ಬಾಬು ಜಗಜೀವನ ರಾಂ ಅವರದ್ದು ಎಂದರು.

ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಅವರಿಗೆ ಸಲ್ಲುವ ಗೌರವ ಡಾ.ಬಾಬು ಜಗಜೀವನ ರಾಂ ಅವರಿಗೂ ಸಲ್ಲಸಬೇಕು. ಕಾರ್ಮಿಕರ, ಶೋಷಿತರ ಪರ ದನಿಯಾಗಿ, ರೈತರಲ್ಲಿ ಹೋರಾಟ ಮತ್ತು ಪ್ರತಿರೋಧದ ಪ್ರಜ್ಞೆ ಭಿತ್ತಿದ್ದರು. ರೈತರು ಮತ್ತು ಸೈನಿಕರಿಗೆ ಬೆನ್ನೆಲುಬಾಗಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದವರು ಬಾಬೂ ಜಗಜೀವನರಾಂ ಎಂದು ಸ್ಮರಿಸಿದರು.

ಸಂವಿಧಾನ ಕರಡು ರಚನಾ ಸಮಿತಿ ಸದಸ್ಯರಾಗಿ ಸಮ ಸಮಾಜ ನಿರ್ಮಾಣ ಮಾಡುವ ಕನಸು ಕಂಡಿದ್ದರು. ವರ್ಗಗಳ ನಡುವೆ ಸಮಾನತೆ ತರಲು ಶ್ರಮಿಸಿದ್ದರು. ಹಸಿರುಕ್ರಾಂತಿ ಮತ್ತು ಸಂಪರ್ಕ ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದರು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಹೆಚ್ಚುವರಿ ಜಿಲ್ಲಾಧಿಕಾರಿ ವೀಣಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು. ಡಾ. ಬಾಬು ಜಗಜೀವನ ರಾಂ ಅವರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಉಡುಪಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಸ್ವಾಗತಿಸಿದರು. ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಪ್ರೊ.ಡಾ.ನಿರ್ಮಲಾ ಕುಮಾರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.