
ಉಡುಪಿ: ಬೈಂದೂರು ಉತ್ಸವವು ಜನವರಿ 24 ರಿಂದ 26 ರ ವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉತ್ಸವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿ, ಜನಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದರು.
ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಬೈಂದೂರು ಕ್ಷೇತ್ರದ ಪ್ರವಾಸೋದ್ಯಮ ಅವಕಾಶಗಳನ್ನು ಪರಿಚಯಿಸುವುದರೊಂದಿಗೆ, ಮತ್ತಷ್ಟು ಅಭಿವೃದ್ಧಿಪಡಿಸಲು, ಹೆಚ್ಚು ಹೆಚ್ಚು ಹೂಡಿಕೆದಾರರನ್ನು ಸೆಳೆಯುವಂತೆ ಮಾಡುವ ಉದ್ದೇಶದಿಂದ ಬೈಂದೂರು ಉತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಉತ್ಸವದಲ್ಲಿ ಬೈಂದೂರಿನ ಪ್ರೇಕ್ಷಣೀಯ ಸ್ಥಳಗಳು, ಸ್ಥಳೀಯ ಧಾರ್ಮಿಕ ಕ್ಷೇತ್ರಗಳ ವೀಡಿಯೊಗಳನ್ನು ಪ್ರದರ್ಶಿಸಬೇಕು. ಉತ್ಸವದ ದಿನಗಳಂದು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಂಗ್ರಹವಾಗುವ ಕಸಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಫ್.ಒ. ಗಣಪತಿ ಉಪಸ್ಥಿತರಿದ್ದರು.