ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಸಂಭ್ರಮದಿಂದ ಆಚರಿಸಿದರು.
ಉಡುಪಿ ನಗರ, ಕಾಪು, ಪಡುಬಿದ್ರಿ, ಶಿರ್ವ, ಕಟಪಾಡಿ, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ಮೊದಲಾದೆಡೆ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ನೆರವೇರಿತು.
ಮುಸ್ಲಿಮರು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮಿಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ, ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
‘ಸಾಮಾಜಿಕ ಮಾಧ್ಯಮಗಳಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್‌ಗಳನ್ನು ಹಾಕಬಾರದು’ ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.