ADVERTISEMENT

ಹೋಂ ಐಸೋಲೇಷನ್‌ನಲ್ಲಿರುವವರಿಗೆ ಆರೋಗ್ಯ ಕಿಟ್: ಸಚಿವ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 10 ಮೇ 2021, 15:57 IST
Last Updated 10 ಮೇ 2021, 15:57 IST
ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   

ಉಡುಪಿ: ಹೋಂ ಐಸೋಲೇಷನ್‌ನಲ್ಲಿ ಸೋಂಕಿತರಿಗೆ ಅಗತ್ಯ ಮಾತ್ರೆಗಳನ್ನು ಒಳಗೊಂಡ ಕಿಟ್‌ಗಳನ್ನು ಉಚಿತವಾಗಿ ನೀಡಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿ ಗತಿಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಹೋಂ ಐಸೋಲೇಷನ್‌ನಲ್ಲಿ ಇರುವವರ ಮನೆಗೆ ಭೇಟಿ ನೀಡಿ ಆರೋಗ್ಯ ಪರಿಶೀಲಿಸಬೇಕು. ಆಮ್ಲಜನಕ ಅಗತ್ಯವಿರುವುದು ಕಂಡುಬಂದರೆ ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಿ ಮರಣ ಪ್ರಮಾಣ ತಡೆಗಟ್ಟಬೇಕು ಎಂದರು.

ಬಹರೈನ್ ಮತ್ತು ಕುವೈತ್‌ನಿಂದ ಬರುವ ಆಮ್ಲಜನಕದಲ್ಲಿ ಜಿಲ್ಲೆಗೆ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಮಾಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾಗಿ 1,500 ಎಲ್‌ಪಿಎಂ ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಖಾಸಗಿಯವರಿಂದ ಲೀಸ್ ಆಧಾರದಲ್ಲಿ ಖಾಲಿ ಸಿಲೆಂಡರ್‌ಗಳನ್ನು ಪಡೆದಿಟ್ಟುಕೊಳ್ಳಿ. ಆಮ್ಲಜನಕ ಪೋಲಾಗದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದರು.

ADVERTISEMENT

ಜಿಲ್ಲಾ ಆಸ್ಪತ್ರೆಯಲ್ಲಿ ಹೊಸದಾಗಿ ಪರೀಕ್ಷಾ ಕೇಂದ್ರ ಆರಂಭಿಸಲಾಗುವುದ. ಈಗಾಗಲೇ 480 ರೆಮಿಡಿಸಿವರ್ ಸರಬರಾಜು ಮಾಡಲಾಗಿದ್ದು, ಹೆಚ್ಚುವರಿಯಾಗಿ 1,000 ರೆಮಿಡಿಸಿವರ್ ಒದಗಿಸಲು ಸೂಚನೆ ನೀಡಲಾಗಿದೆ. ಅಗತ್ಯ ಔಷಧ ಮತ್ತು ಆಮ್ಲಜನಕ ಬೇಕಿದ್ದರೆ 2 ದಿನ ಮೊದಲೇ ಗಮನಕ್ಕೆ ತರುವಂತೆ ಸಚಿವರು ಸೂಚನೆ ನೀಡಿದರು.

ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ನಿಧಿಯಿಂದ ಅಗತ್ಯವಿರುವ ವೈದ್ಯಕೀಯ ನೆರವು ಪಡೆಯುವಂತೆ ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್‌ಪಿ ವಿಷ್ಣುವರ್ಧನ್, ಡಾ.ಸುಧೀರ್ ಚಂದ್ರ ಸೂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.