ADVERTISEMENT

‘ಬೀಚ್ ಪ್ರವಾಸೋದ್ಯಮಕ್ಕೆ ಉತ್ತೇಜನ’

ಬೀಚ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಜಿಲ್ಲಾಧಿಕಾರಿ ಪ್ರತಿಪಾದನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 5:19 IST
Last Updated 28 ಸೆಪ್ಟೆಂಬರ್ 2025, 5:19 IST
ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಚಾಲನೆ ನೀಡಿದರು
ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಚಾಲನೆ ನೀಡಿದರು   

ಉಡುಪಿ: ಜಿಲ್ಲೆಯು ದೇಗುಲ, ಪ್ರವಾಸೋದ್ಯಮದಲ್ಲಿ ಈಗಾಗಲೇ ಮುಂಚೂಣಿಯಲ್ಲಿದೆ. ಇಲ್ಲಿನ ದೇವಸ್ಥಾನಗಳಲ್ಲಿ ಜರುಗುವ ಹಬ್ಬ ಹರಿದಿನಗಳು ರಾಜ್ಯದಲ್ಲೇ ಹೆಸರುವಾಸಿಯಾಗಿದ್ದು, ಲಕ್ಷಾಂತರ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ. ಇದರ ಜೊತೆಗೆ ಬೀಚ್‌ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಮಲ್ಪೆ ಬೀಚ್‌ನಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಬೀಚ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಯು ಬೀಚ್ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವನ್ನು ಹೊಂದಿರುವ ತಾಣವಾಗಿದೆ. ಬೀಚ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೀಚ್ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ADVERTISEMENT

ಮುಂದಿನ ದಿನಗಳಲ್ಲಿ ಜಲಕ್ರೀಡೆ ಮತ್ತು ವಾಯು ಕ್ರೀಡೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ. ಸ್ವಚ್ಛತಾ ಸಪ್ತಾಹದ ಅಂಗವಾಗಿ ಈಗಾಗಲೇ ಎಂಟು ಬೀಚ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬೀಚ್ ಕ್ರೀಡಾಕೂಟಗಳನ್ನು ಹಮ್ಮಿಕೊಂಡು ಬೀಚ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೀಚ್‌ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಜನರು ಆಸಕ್ತಿಯಿಂದ ಭಾಗವಹಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಯಾದವ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉದ್ಯಮಿ ಪ್ರತಿಭಾ ಕಾಂಚನ್ ಇದ್ದರು.

ಕ್ರೀಡಾಕೂಟದಲ್ಲಿ ಚಿಣ್ಣರು ಪಾಲ್ಗೊಂಡಿದ್ದರು

‘ಹೊಸ ಪ್ರವಾಸಿ ತಾಣಗಳ ಅಭಿವೃದ್ಧಿ’

ಜಿಲ್ಲೆಯ ಹಲವಾರು ಪ್ರವಾಸಿ ತಾಣಗಳು ಇನ್ನೂ ಪ್ರವಾಸಿಗರ ಕಣ್ಣಿಗೆ ಬಿದ್ದಿಲ್ಲ. ಅಂತಹ ಪ್ರವಾಸಿ ತಾಣಗಳನ್ನು ಗುರುತಿಸುವ ಮತ್ತು ಅವುಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿ ಇನ್ನೂ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿ ಇದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಮಗ್ರ ಪ್ರವಾಸಿ ತಾಣಗಳಿಗೆ ಪ್ರಚಾರ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಜಿಲ್ಲೆಯು ಪ್ರವಾಸೋದ್ಯಮದಲ್ಲಿಯೂ ರಾಜ್ಯಕ್ಕೇ ಮಾದರಿಯಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿ ವಿಶ್ವ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನದಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.