ಉಡುಪಿ: ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ನ.19ರಂದು ಬೆಳಿಗ್ಗೆ 11ಕ್ಕೆ ಉಡುಪಿಯ ಪುರಭವನದಲ್ಲಿ ‘ಜನಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕಿದಿಯೂರ್ ಹೋಟೆಲ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಪಕ್ಷದ ನೇತೃತ್ವವನ್ನು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಂಡಗಳು ವಹಿಸಿಕೊಂಡಿದ್ದು, ರಾಜ್ಯದಾದ್ಯಂತ ನ.19ರಿಂದ ನ.23ರ ವರೆಗೆ ಜನಸ್ವರಾಜ್ ಸಮಾವೇಶ ಆಯೋಜಿಸಲಾಗಿದೆ ಎಂದರು.
ಉಡುಪಿಯಲ್ಲಿ ನ.19ರಂದು ನಡೆಯುವ ಜನಸ್ವರಾಜ್ ನೇತೃತ್ವವನ್ನು ಸಚಿವ ಕೆ.ಎಸ್. ಈಶ್ವರಪ್ಪ ವಹಿಸಿಕೊಂಡಿದ್ದು, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಡಿ.ವಿ. ಸದಾನಂದ ಗೌಡ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್, ಅರ್.ಅಶೋಕ್, ಎಸ್.ಅಂಗಾರ, ಎಸ್.ಟಿ. ಸೋಮಶೇಖರ್, ಹಾಲಪ್ಪ ಆಚಾರ್ ಭಾಗವಹಿಸಲಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಎಂ.ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜನಸ್ವರಾಜ್ ಸಮಾವೇಶದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ಇದ್ದರು.
ಕೋಟ ಸ್ಪರ್ಧೆ ಖಚಿತ ?
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಾಗಿರುವುದರಿಂದ ಪಕ್ಷದಿಂದ ಒಬ್ಬ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ. ಎರಡನೇ ಅಭ್ಯರ್ಥಿ ಗೆಲುವಿಗೆ ಸ್ವಲ್ಪ ಮತಗಳ ಕೊರತೆ ಬೀಳಬಹುದು. ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
‘ಹೊಂದಾಣಿಕೆ ರಾಜಕೀಯ ಇಲ್ಲ’
ಎರಡನೇ ಅಭ್ಯರ್ಥಿ ನಿಲ್ಲಿಸುವ ವಿಚಾರದಲ್ಲಿ ಬಿಜೆಪಿ ಪಕ್ಷ ಅಥವಾ ಪಕ್ಷೇತ್ತರರ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಪಕ್ಷೇತ್ತರವಾಗಿ ಯಾರೇ ಸ್ಪರ್ಧಿಸಿದರೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಮತಗಳು ಆಚೀಚೆ ಹೋಗದಂತೆ ಬಹಳ ಎಚ್ಚರ ವಹಿಸಲಾಗಿದೆ. ಮತ ಚಲಾಯಿಸುವುದು ಹೇಗೆ ಎಂಬ ಕುರಿತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.