ADVERTISEMENT

ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ: ಡಾ. ಅಶೋಕ್

ಕರ್ಣಾಟಕ ಬ್ಯಾಂಕ್‌ನ 102ನೇ ಸಂಸ್ಥಾಪಕರ ದಿನಾಚರಣೆಯಲ್ಲಿ ಡಾ. ಅಶೋಕ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 2:49 IST
Last Updated 19 ಫೆಬ್ರುವರಿ 2026, 2:49 IST
ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ಜರುಗಿತು
ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ಜರುಗಿತು   

ಉಡುಪಿ: ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್. ಅಶೋಕ್ ಹೇಳಿದರು.

ಕರ್ಣಾಟಕ ಬ್ಯಾಂಕ್‌ನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕ್‌ನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಅಂಬಾಗಿಲಿನ ಕರ್ನಾಟಕ ಬ್ಯಾಂಕ್‌ನ ಉಡುಪಿ ವಲಯ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿವರ್ಷ 41 ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಗಾಯಾಳುಗಳು ಮೃತಪಡುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದರು.

ADVERTISEMENT

ಗಾಂಧಿ ಆಸ್ಪತ್ರೆಯ ಮಖ್ಯಸ್ಥ ಡಾ.ಹರೀಶ್ಚಂದ್ರ ಮಾತನಾಡಿ, ಜನಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕು ಎಂದು ಹೇಳಿದರು.

ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ರಮೇಶ್ ವೈದ್ಯ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾ ಕುಮಾರಿ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿದರ್ಶಕ ಡಾ.ವ್ಯಾಸರಾಜ ತಂತ್ರಿ ಮಾತನಾಡಿದರು.

ಕರ್ಣಾಟಕ ಬ್ಯಾಂಕ್‌ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಬಾರ್ವೆ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ ಸುಮಾರು 50 ಜನರು ರಕ್ತದಾನ‌ ಮಾಡಿದರು.

ಶಿಬಿರದಲ್ಲಿ ಮಧುಮೇಹ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ದಂತ ತಪಾಸಣೆ, ಇಸಿಜಿ ಹಾಗೂ ರಕ್ತದಾನ ಶಿಬಿರವನ್ನೂ ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಬ್ಯಾಂಕ್ ಗ್ರಾಹಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.