ಬ್ರಹ್ಮಾವರ: ಆರ್ಥಿಕ ವರ್ಷಾಂತ್ಯ ಸಮೀಪಿಸುತ್ತಿದ್ದು, ನಿಗದಿತ ಕಾಲಮಿತಿಯೊಳಗೆ ಎಲ್ಲ ಇಲಾಖೆಗಳು ಅನುದಾನದ ಸಮರ್ಪಕ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಭುವನೇಶ್ವರಿ ಸೂಚಿಸಿದರು.
ಸೋಮವಾರ ನಡೆದ ಬ್ರಹ್ಮಾವರ ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾರ್ಚ್ ಅಂತ್ಯದ ಒಳಗೆ ಅನುದಾನ ಸದ್ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪನೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿದ ಅವರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಬೇಕು ಎಂದು ತಿಳಿಸಿದರು. ಅನುದಾನದ ಕೊರತೆಯಾದರೆ ತಕ್ಷಣ ಸಂಬಂಧಪಟ್ಟವರ ಗಮನಕ್ಕೆ ಸಲ್ಲಿಸಬೇಕು ಎಂದರು.
ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನಕ್ಕೆ ಉತ್ತಮ ಅವಕಾಶಗಳಿದ್ದು ನಿಗದಿತ ಗುರಿ ಸಾಧಿಸಲು, ವೈಯಕ್ತಿಕ ಹಾಗೂ ಸಾಮೂಹಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡಬೇಕೆಂದು ಅವರು ಹೇಳಿದರು.
ಪಶು ಸಂಗೋಪನಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದನ್ನು ಅಧಿಕಾರಿಗಳು ಗಮನಕ್ಕೆ ತಂದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ಇಬ್ರಾಹಿಂಪುರ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. ಬ್ರಹ್ಮಾವರ ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ಮೆಲ್ವಿನ್, ಸಹಾಯಕ ನಿರ್ದೇಶಕ ಮಹೇಶ ಕೆ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.