ಶಿರ್ವ: ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಶಿರ್ವದ ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ 2024–25ನೇ ಸಾಲಿನ ಕಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಶಿರ್ವದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಜರುಗಿತು.
ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿ.ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಸಮಿತಿಯ ಅಧ್ಯಕ್ಷ ಎಸ್.ನಿತ್ಯಾನಂದ ಹೆಗ್ಡೆ ಉದ್ಘಾಟಿಸಿದರು.
ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಮಾತನಾಡಿ, ‘ಮಕ್ಕಳಿಗೆ ಶಿಕ್ಷಣ ಒದಗಿಸುವುದರ ಜೊತೆಗೆ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳನ್ನು ಸಂಘಟಿಸುವ ಅಗತ್ಯವಿದೆ. ಅಧ್ಯಾಪಕರು, ಹೆತ್ತವರು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು’ ಎಂದರು.
ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ.ಭಾಸ್ಕರ ಶೆಟ್ಟಿ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುನೀತಾ, ಕಳತ್ತೂರು ಕ್ಲಸ್ಟರ್‌ನ ಸಿ.ಆರ್.ಪಿ. ಸರಿತಾ ರಾಣಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಕಿರಣ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಕಾಮತ್, ಶಾಲಾ ಶಿಕ್ಷಣ ಸಮಿತಿ ಸದಸ್ಯ ಸಚ್ಚಿದಾನಂದ ಹೆಗ್ಡೆ ಇದ್ದರು.
ಕಾರ್ಯಕ್ರಮದಲ್ಲಿ ಕಳತ್ತೂರು ಕ್ಲಸ್ಟರ್ ವ್ಯಾಪ್ತಿಯ 15 ಸಂಸ್ಥೆಗಳಿಂದ 366 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಶಾಲಿನಿ ಶೆಟ್ಟಿ ಸ್ವಾಗತಿಸಿದರು. ಶುಭಶ್ರೀ ನಿರೂಪಿಸಿದರು. ಸಹಶಿಕ್ಷಕಿ ಶಾಲಿನಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.