ADVERTISEMENT

ಒಕ್ಕೂಟ ವ್ಯವಸ್ಥೆಗೆ ಕೊಡಲಿ ಏಟು: ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪ

ಬಜೆಟ್‌ನಲ್ಲಿ ರಾಜ್ಯದ ಅವಗಣನೆ: ಜಿಲ್ಲಾ ಕಾಂಗ್ರೆಸ್ ಸಮಿತಿ ಆರೋಪ

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 7:11 IST
Last Updated 27 ಜುಲೈ 2024, 7:11 IST
ಬಜೆಟ್‌ನಲ್ಲಿ ರಾಜ್ಯವನ್ನು ಅವಗಣನೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್‌ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು
ಬಜೆಟ್‌ನಲ್ಲಿ ರಾಜ್ಯವನ್ನು ಅವಗಣನೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್‌ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು   

ಉಡುಪಿ: ‘ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ನಲ್ಲಿ ತಾರತಮ್ಯ ಮಾಡುವ ಮೂಲಕ, ಒಕ್ಕೂಟ ವ್ಯವಸ್ಥೆಗೆ ಕೊಡಲಿ ಏಟು ನೀಡಿದ್ದಾರೆ’ ಎಂದು ಮಾಜಿ ಶಾಸಕ ವಿನಯ್‌ ಕುಮಾರ್‌ ಸೊರಕೆ ಆರೋಪಿಸಿದರು.

ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್‌ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಬಜೆಟ್ ಇಡೀ ದೇಶದ ಎಲ್ಲಾ ಸವಾಲುಗಳಿಗೂ ಪರಿಹಾರ ತಂದುಕೊಡುವ ವ್ಯವಸ್ಥೆ. ಆದರೆ ಈ ಬಜೆಟ್‌, ಕುರ್ಚಿ, ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿರುವ ಬಜೆಟ್ ಆಗಿದೆ. ಬಿಹಾರ ಮತ್ತು ಆಂಧ್ರ ಪ್ರದೇಶಗಳಿಗೆ ಸಿಂಹಪಾಲು ಅನುದಾನ ಕೊಟ್ಟು, ಉಳಿದ ರಾಜ್ಯಗಳಿಗೆ ಅನ್ಯಾಯ ಮಾಡಲಾಗಿದೆ. ರಾಜ್ಯದಿಂದ ಆಯ್ಕೆಯಾದ ಬಿಜೆಪಿಯ 17 ಮತ್ತು ಜೆಡಿಎಸ್‌ನ ಇಬ್ಬರು ಸಂಸದರು ಹಾಗೂ ಕೇಂದ್ರ ಸಚಿವರಿದ್ದೂ ಕರ್ನಾಟಕಕ್ಕೆ ಘೋರ ಅನ್ಯಾಯವಾಗಿದೆ’ ಎಂದು ಹೇಳಿದರು.

ADVERTISEMENT

ದೇಶದಲ್ಲಿ ಶೇ 85ರಷ್ಟು ಪದವೀಧರರು ಉದ್ಯೋಗವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಶೇ 41ರಷ್ಟು ಅನುದಾನ ನೀಡಬೇಕಿತ್ತು. ಆದರೆ, ಶೇ 32ರಷ್ಟು ಅನುದಾನವನ್ನಷ್ಟೇ ರಾಜ್ಯಗಳಿಗೆ ನೀಡಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಮಾತನಾಡಿ, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಿಗೆ ಬಜೆಟ್‌ನಲ್ಲಿ ತಾರತಮ್ಯ ಮಾಡಲಾಗಿದೆ. ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನಕಾರರು ಕೈಯಲ್ಲಿ ಚೊಂಬು ಹಿಡಿದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್‌, ಉಪಾಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ವಾಗ್ಲೆ, ವರೋನಿಕಾ ಕರ್ನೆಲಿಯೊ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.