ಉಡುಪಿ: ‘9/11 ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದರು.
ಉಡುಪಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸತ್ಯ ದರ್ಶನ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
‘ಏಕ ವಿನ್ಯಾಸ ನಕ್ಷೆ ಅನುಮೋದನೆಯನ್ನು ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಲಾಗಿದೆ’ ಎಂದು ಅವರು ಹೇಳಿದರು.
‘ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಆ ಪಕ್ಷದವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿಸುವ ಕೆಲಸವನ್ನು ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿದೆ’ ಎಂದರು.
‘ಯುವಜನರಿಗೆ ಉದ್ಯೋಗ ನೀಡುವುದು ಸೇರಿದಂತೆ ಚುನಾವಣೆ ವೇಳೆ ನೀಡಿದ್ದ ಯಾವ ಭರವಸೆಗಳನ್ನೂ ಕೇಂದ್ರದ ಬಿಜೆಪಿ ಸರ್ಕಾರ ಈಡೇರಿಸಿಲ್ಲ. ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ’ ಎಂದು ಹೇಳಿದರು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ‘ಬ್ರಹ್ಮಾವರದ ಕುಂಜಾಲುವಿನಲ್ಲಿ ಈಚೆಗೆ ದನದ ರುಂಡ ಪತ್ತೆಯಾದಾಗ ಬಿಜೆಪಿಯವರು ಪ್ರತಿಭಟನೆ ನಡೆಸಿದರು. ಆದರೆ ಕಾಂಗ್ರೆಸ್ ಪಕ್ಷವು ಅಲ್ಲಿ ಸೌಹಾರ್ದ ಸಭೆ ನಡೆಸುವ ಮೂಲಕ ಜನರಲ್ಲಿ ಮೂಡಿದ್ದ ಗೊಂದಲವನ್ನು ಪರಿಹರಿಸಲು ಪ್ರಯತ್ನಿಸಿದೆ’ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ‘ಸುಳ್ಳಿನ ಮೂಲಕ ಜನರನ್ನು ಮರುಳು ಮಾಡುವ ಕೆಲಸವನ್ನು ಬಿಜೆಪಿ ಮಾಡಿದರೆ, ಜನರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಪಂಚ ಗ್ಯಾರಂಟಿಗಳೇ ಅದಕ್ಕೆ ಉತ್ತಮ ಉದಾಹರಣೆ’ ಎಂದರು.
ಪ್ರಮುಖರಾದ ರಮೇಶ್ ಕಾಂಚನ್, ಪ್ರಸಾದ್‌ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ವೆರೋನಿಕಾ ಕರ್ನೇಲಿಯೊ, ಅಮೃತ್ ಶೆಣೈ ಉಪಸ್ಥಿತರಿದ್ದರು.
ಜಾತಿ ಜಾತಿಗಳ ನಡುವೆ ಗೊಂದಲ ಸೃಷ್ಟಿಸಿ ಅದರಿಂದ ಲಾಭ ಪಡೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದೂ ಮಾಡಿಲ್ಲಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.