ಬ್ರಹ್ಮಾವರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಪಪ್ರಚಾರ ಮಾಡುತ್ತಿದೆ, ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಚಾಂತಾರು ಗ್ರಾಮ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ‘ರಾಜ್ಯ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಾ ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ’ ಎಂದು ದೂರಿದರು.
ಪಂಚ ಗ್ಯಾರಂಟಿ ಯೋಜನೆ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ಕಾಂಗ್ರೆಸ್, ಎಲ್ಲೆಡೆ ಉತ್ತಮ ಸರ್ಕಾರ ಎನ್ನುವ ಹೆಗ್ಗಳಿಕೆ ಪಡೆದಿದೆ. 40 ಪರ್ಸೆಂಟ್ ಕಮಿಷನ್ ಹೊಡೆದು ರಾಜ್ಯವನ್ನು ದಿವಾಳಿ ಮಾಡಿದ್ದು ಹಿಂದಿನ ಬಿಜೆಪಿ ಸರ್ಕಾರ. ಆದರೆ ಮುಂದಿನ ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಸುಳ್ಳು ಹೇಳಿಕೊಂಡು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ಮಾತನಾಡಿ, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ ಬಿಜೆಪಿಯವರು ಅಭಿವೃದ್ಧಿ ಆಗುತ್ತಿಲ್ಲ ಎನ್ನುತ್ತಾರೆ. ಅವರು ಸುಳ್ಳು ಹೇಳಿಕೊಂಡು ಬರುವ ಕಡೆ ನಾವು ಸತ್ಯ ತಿಳಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ ಶೆಟ್ಟಿ, ಅಮೃತ ಶೆಣೈ, ಕೀರ್ತಿ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ, ಬ್ಲಾಕ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಜಿ.ಪಂ. ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಗೋಪಿ ಕೆ. ನಾಯ್ಕ, ಮುಖಂಡರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ಸ್ಥಳೀಯ ನಾಯಕರಾದ ಪ್ರಶಾಂತ ಸುವರ್ಣ, ಮಹೇಶ ಮೊಯಿಲಿ, ನವೀನ ಬಂಗೇರ, ಉದಯ ಆಚಾರ್ಯ, ಭುವನೇಶ ಕರ್ಜೆ, ಹರೀಶ ಶೆಟ್ಟಿ ಕರ್ಜೆ, ಕುಮಾರ್ ಸುವರ್ಣ, ಸೂರ್ಯ ಸಾಲಿಯಾನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.