ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತ್ತೆ ಅಧಿಕಾರ: ವಿಶ್ವಾಸ

ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಗೋಪಾಲ ಪೂಜಾರಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 3:42 IST
Last Updated 26 ಜುಲೈ 2021, 3:42 IST
ಮರವಂತೆ ಗ್ರಾಮೀಣ ಕಾಂಗ್ರೆಸ್‌ ನಿರ್ಗಮನ ಅಧ್ಯಕ್ಷ ಪುಟ್ಟಯ್ಯ ಪೂಜಾರಿ ಅವರು ನೂತನ ಅಧ್ಯಕ್ಷ ಗಣೇಶ ಪೂಜಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಾಜಿ ಶಾಸಕ ಗೋಪಾಲ ಪೂಜಾರಿ ಇದ್ದರು
ಮರವಂತೆ ಗ್ರಾಮೀಣ ಕಾಂಗ್ರೆಸ್‌ ನಿರ್ಗಮನ ಅಧ್ಯಕ್ಷ ಪುಟ್ಟಯ್ಯ ಪೂಜಾರಿ ಅವರು ನೂತನ ಅಧ್ಯಕ್ಷ ಗಣೇಶ ಪೂಜಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಾಜಿ ಶಾಸಕ ಗೋಪಾಲ ಪೂಜಾರಿ ಇದ್ದರು   

ಬೈಂದೂರು: ‘ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಕಾರ್ಯಕರ್ತರ ಪಡೆ, ಬೆಂಬಲ ಇದೆ. ಕಾರ್ಯಕರ್ತರ ಬೆಂಬಲದಿಂದ ಸಂಘಟನೆ ಬಲಪಡಿಸಿ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಮರವಂತೆಯಲ್ಲಿ ಭಾನುವಾರ ನಡೆದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಿದೆ. ಯುವ ಜನರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳ ಕಾರ್ಯಕರ್ತರನ್ನು ನೇರವಾಗಿ ಸಂಪರ್ಕಿಸಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಲಾಗುವುದು ಎಂದುಹೇಳಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಪಕ್ಷದ ಪ್ರಮುಖರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಗೌರಿ ದೇವಾಡಿಗ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ದುರಾಡಳಿತದಿಂದ ಜನ ಸಾಮಾನ್ಯರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇನ್ನು ಹೆಚ್ಚು ದಿನ ಇದೇ ರೀತಿ ಅಧಿಕಾರದಲ್ಲಿ ಮುಂದುವರಿದರೆ ಜನರು ಮತ್ತಷ್ಟು ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದರು.

ಕಾರ್ಯಕರ್ತರಾದ ಜನಾರ್ದನ ಖಾರ್ವಿ, ಶಂಕರ ಪೂಜಾರಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಲವು ಸಲಹೆ ನೀಡಿದರು.

ಗ್ರಾಮೀಣ ಕಾಂಗ್ರೆಸ್ ನಿರ್ಗಮನ ಅಧ್ಯಕ್ಷ ಪುಟ್ಟಯ್ಯ ಪೂಜಾರಿ ನೂತನ ಅಧ್ಯಕ್ಷ ಗಣೇಶ ಪೂಜಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಎಂ. ವಿನಾಯಕ ರಾವ್ ಸ್ವಾಗತಿಸಿ ವಂದಿಸಿದರು. ರಾಜೇಶ ದೇವಾಡಿಗ, ನಾಗರಾಜ ಗಾಣಿಗ ಇದ್ದರು.

ಕಾರ್ಯಕ್ರಮಕ್ಕೂ ಮೊದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ದುರ್ಗಾ ಯಕ್ಷೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.