
ಉಡುಪಿ: ಸಂವಿಧಾನದ ಮೂಲ ತತ್ವಗಳನ್ನು ಅತ್ಯಂತ ಸರಳವಾಗಿ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಕವಿತೆಯ ರೂಪದಲ್ಲಿರುವ ‘ಭಾರತದ ಸಂವಿಧಾನದ ಮೂಲ ಆಶಯಗಳು’ ಎನ್ನುವ ಪುಸ್ತಕವನ್ನು ಹೊರತಂದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಗಳ ಆಶ್ರಯದಲ್ಲಿ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಂವಿಧಾನದ ಮೂಲ ಭಾವವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸಂವಿಧಾನ ಶಿಲ್ಪಿಗಳು ಸಂವಿಧಾನದ ಸ್ವರೂಪವನ್ನು ಸ್ಪಷ್ಟತೆ ಮತ್ತು ವೈಜ್ಞಾನಿಕತೆಯಿಂದ ರಚಿಸಿದ್ದಾರೆ ಎಂದರು.
ಸಂವಿಧಾನ ಎಂದರೆ ಕೇವಲ ಪೀಠಿಕೆ ಅಲ್ಲ. ದೇಶದ ಭೌಗೋಳಿಕ ಸನ್ನಿವೇಶ, ಹೆಸರು, ನಾಗರಿಕರು ಹೊಂದಿರುವ ಹಕ್ಕು ಮತ್ತು ಕರ್ತವ್ಯಗಳು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯಗಳನ್ನು ಸಂವಿಧಾನದಲ್ಲಿ ವಿಸ್ತಾರವಾಗಿ ವಿವರಿಸಲಾಗಿದೆ. ದೇಶದ ನಾಗರಿಕರೆಲ್ಲರೂ ಸಂವಿಧಾನವನ್ನು ಓದಿ, ಗೌರವಿಸಿ, ರಕ್ಷಿಸಿ ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೂ ಮುನ್ನ ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಕಪ್ಪ ಆರ್. ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.