ADVERTISEMENT

ಸಪ್ತಾಹದಿಂದ ಸಹಕಾರಿ ಕ್ಷೇತ್ರದ ಬಲವರ್ಧನೆ

ಉಚ್ಚಿಲ: ಸಹಕಾರ ಸಪ್ತಾಹಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ರಾಜೇಂದ್ರ ಕುಮಾರ್ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 5:11 IST
Last Updated 15 ನವೆಂಬರ್ 2022, 5:11 IST
ಉಚ್ಚಿಲದ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಕ್ಕೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ಚಾಲನೆ ನೀಡಿದರು (ಎಡಚಿತ್ರ). ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಶ್ರಯದಲ್ಲಿ ಸೋಮವಾರ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರೈತರ ಸಮಾವೇಶದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು
ಉಚ್ಚಿಲದ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಕ್ಕೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ಚಾಲನೆ ನೀಡಿದರು (ಎಡಚಿತ್ರ). ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಶ್ರಯದಲ್ಲಿ ಸೋಮವಾರ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರೈತರ ಸಮಾವೇಶದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು   

ಶಿರ್ವ: ‘ಸಹಕಾರಿ ಉತ್ಸವದ ರೀತಿಯಲ್ಲಿ ಸಹಕಾರಿ ಸಪ್ತಾಹವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ. ಇದರ ಉದ್ದೇಶ ಸಹಕಾರಿ ಕ್ಷೇತ್ರವನ್ನು ಬೆಳೆಸುವುದು ಮಾತ್ರವಲ್ಲದೆ ಸಹಕಾರಿ ಕ್ಷೇತ್ರಕ್ಕೆ ಇನ್ನಷ್ಟು ಜನರನ್ನು ಬರಮಾಡಿಕೊಳ್ಳುವುದಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಗ್ರಾಮವಿಕಾಸ ಚಾರಿಟಬಲ್ ಟ್ರಸ್ಟ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್, ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ಗಳು, ಸಹಕಾರ ಇಲಾಖೆ, ಸಹಕಾರ ಸಂಘಗಳ ವತಿಯಿಂದ ಉಚ್ಚಿಲದ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಾರಿ ಶಕ್ತಿಯ ಮುಂದೆ ಯಾವ ಶಕ್ತಿಯೂ ಇಲ್ಲ. ಉಚ್ಚಿಲದಲ್ಲಿ ನಡೆದ ಸಹಕಾರಿ ಉತ್ಸವದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳೆಯರು ಸೇರಿ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. 120 ವರ್ಷಗಳ ಇತಿಹಾಸವಿರುವ ಸಹಕಾರಿ ಕ್ಷೇತ್ರವನ್ನು ಬ್ರಿಟಿಷರು ಕೂಡಾ ಗೌರವಿಸುವಂತಾಗಿದೆ. ನಿಜಕ್ಕೂ ಉಡುಪಿ ಜಿಲ್ಲೆಯ ಉಚ್ಚಿಲದಲ್ಲಿ ಕರಾವಳಿ ಜಿಲ್ಲೆಯ ಸಹಕಾರಿಗಳ ಶಕ್ತಿಪ್ರದರ್ಶನ ನಡೆದಿದೆ’ ಎಂದರು.

ADVERTISEMENT

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲಕ್ಕೆ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಪತ್ರ, ಸ್ಮರಣಿಕೆ, ಬೆಳ್ಳಿ ಶಂಖದೊಂದಿಗೆ ಸನ್ಮಾನಿಸಲಾಯಿತು.

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆಗಳು ಅಭೂತಪೂರ್ವವಾಗಿ ಬೆಳೆಯುತ್ತಿವೆ. ಉಡುಪಿ ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ₹ 4200 ಕೋಟಿ ಠೇವಣಿ ಹೊಂದಿರಲು ಸಹಕಾರಿ ಕೇತ್ರದ ಮೇಲೆ ಜನರು ಇರಿಸಿರುವ ವಿಶ್ವಾಸವೇ ಕಾರಣ. ಮುಂದಿನ ದಿನಗಳಲ್ಲಿ ವಿಧಾನ ಪರಿಷತ್, ರಾಜ್ಯಸಭೆಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.

ಡಿಸಿಸಿ ಬ್ಯಾಂಕ್ ಹಾಗೂಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರನ್ನು ಸನ್ಮಾನಿಸಲಾಯಿತು.

ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಎ.ಸುವರ್ಣ, ಅರುಣಾ ರಾಜೇಂದ್ರ ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್,
ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ, ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಮೈಸೂರು ಸಹಕಾರ ಸಂಘಗಳ ಜಂಟಿ ನಿರ್ದೇಶಕ ಡಾ. ಉಮೇಶ್ ಜಿ, ಸಹಕಾರಿ ಇಲಾಖಾ ಅಧಿಕಾರಿಗಳಾದ ಲಕ್ಷ್ಮೀ ನಾರಾಯಣ ಜಿ.ಎನ್, ಪ್ರವೀಣ್ ನಾಯಕ್, ರಮೇಶ್ ಎಚ್.ಎಸ್, ಲಾವಣ್ಯ ಕೆ.ಆರ್, ಸುಧೀರ್ ಕುಮಾರ್, ಗೋಪಿನಾಥ್ ಭಟ್, ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಸಿಇಒ ಹರೀಶ್ ಬಿ.ಬಿ. ಇದ್ದರು.

ಡಾ.ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ ದರು. ಶ್ರೀಧರ್ ಪಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕುತ್ಯಾರು ಪ್ರಸಾದ್ ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಸತೀಶ್ಚಂದ್ರ ಶೆಟ್ಟಿ, ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಧ್ವಜಾರೋಹಣ, ಬೈಕ್‌ ರ‍್ಯಾಲಿ

ಉಡುಪಿ ಜಿಲ್ಲೆಯ 800ಕ್ಕೂ ಮೇಲ್ಪಟ್ಟ ಸಹಕಾರ ಸಂಸ್ಥೆಗಳಲ್ಲಿ ಬೆಳಿಗ್ಗೆ ಸಹಕಾರ ಧ್ವಜಾರೋಹಣ ಮಾಡಲಾಯಿತು. ಸಂಸ್ಥೆಗಳಲ್ಲಿ ಸಹಕಾರ ಗೀತೆ ಮತ್ತು ನಾಡಗೀತೆಯನ್ನು ಹಾಡುವ ಮೂಲಕ ಸಹಕಾರಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ನೌಕರರು ದ್ವಿ-ಚಕ್ರ ವಾಹನ ಮತ್ತು ನಾಲ್ಕು ಚಕ್ರ ವಾಹನಗಳಲ್ಲಿ ಸಹಕಾರ ಧ್ವಜವನ್ನು ಕಟ್ಟಿಕೊಂಡು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು.

ಶಿರೂರು- ಬೈಂದೂರು- ಕುಂದಾಪುರ- ಬ್ರಹ್ಮಾವರ- ಉಡುಪಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯ ಉದ್ಯಾವರ ಜಂಕ್ಷನ್‌ನಲ್ಲಿ ಸೇರಿದರು. ಉದ್ಯಾವರ ರಾಷ್ಟ್ರೀಯ ಹೆದ್ದಾರಿ ಸಮೀಪ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ವಾಹನ ರ‍್ಯಾಲಿಗೆ ಚಾಲನೆ ನೀಡಿದರು. ಕಾರ್ಕಳ ತಾಲ್ಲೂಕಿನ ಸಹಕಾರಿಗಳು ಬೆಳ್ಮಣ್ ಮಾರ್ಗವಾಗಿ ಬಂದರು.

ಮೆರವಣಿಗೆಯಲ್ಲಿ ಆಕರ್ಷಕ ಸ್ತಬ್ಧಚಿತ್ರಗಳು ಗಮನ ಸೆಳೆದವು. ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಎಂ.ಎನ್.ರಾಜೇಂದ್ರಕುಮಾರ್ ಹಾಗೂ ಅತಿಥಿಗಳನ್ನು ಮೆರವಣಿಗೆಯಲ್ಲಿ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನಕ್ಕೆ ಕರೆ ತರಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.