ADVERTISEMENT

ಉಡುಪಿ: ಸೋಂಕಿತರನ್ನು ಕೋವಿಡ್‌ ಕೇರ್ ಕೇಂದ್ರಕ್ಕೆ ವರ್ಗಾಯಿಸಿ -ಡಾ.ವೈ, ನವೀನ್ ಭಟ್

ಜಿಲ್ಲಾ ಪಂಚಾಯಿತಿ ಸಿಇಒ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 16:40 IST
Last Updated 3 ಆಗಸ್ಟ್ 2021, 16:40 IST
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಸಭೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಸಭೆ ನಡೆಸಿದರು.   

ಉಡುಪಿ: ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ವರ್ಗಾಯಿಸಿ ಅಗತ್ಯ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಸಭೆಯಲ್ಲಿ ಮಾತನಾಡಿ, ಆ.5ರಿಂದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ಕೇರ್ ಕೇಂದ್ರಗಳಿಗೆ ವರ್ಗಾಯಿಸಿ ಉತ್ತಮ ಚಿಕಿತ್ಸೆ ನೀಡಬೇಕು. ಇದರಿಂದ ಕೋವಿಡ್‌ ಹರಡುವಿಕೆಯ ಸರಪಳಿ ಕತ್ತರಿಸಬಹುದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ತಾಲ್ಲೂಕುಗಳಲ್ಲಿ ಕೋವಿಡ್‌ಕೇರ್ ಸೆಂಟರ್‌ ತೆರೆದು, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸೋಂಕಿತರ ಆರೈಕೆಗೆ ಆದ್ಯತೆ ನೀಡಬೇಕು. ಕೋವಿಡ್‌ಕೇರ್ ಕೇಂದ್ರಗಳಿಗೆ ಅಗತ್ಯವಿರುವ ವೈದ್ಯರು ಹಾಗೂ ಶುಶ್ರೂಷಕರನ್ನು ನಿಯೋಜಿಸಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಪ್ರತಿದಿನ 5,000ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳು ನಡೆಯಬೇಕು ಜಿಲ್ಲಾ ಡಿಎಚ್‌ಒ ಡಾ.ನಾಗಭೂಷಣ ಉಡುಪಗೆ ಸೂಚನೆ ನೀಡಿದ ಸಿಇಒ ಗ್ರಾಮ ಪಂಚಾಯಿತಿಗಳು ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಹಕಾರ ನೀಡಬೇಕು ಎಂದರು.

ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ರೈಲುಗಳಲ್ಲಿ ಬರುವವರು ಕಡ್ಡಾಯವಾಗಿ 72 ಗಂಟೆ ಅವಧಿ ಮೀರದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು. ಈ ಬಗ್ಗೆ ತಪಾಸಣೆ ಮಾಡಬೇಕು, ನೆಗೆಟಿವ್ ವರದಿ ಇಲ್ಲದೆ ಬಂದರೆ ಸ್ಥಳದಲ್ಲಿಯೇ ಪರೀಕ್ಷೆ ಮಾಡಬೇಕು ಎಂದರು.

ಕೋವಿಡ್ ಸೋಂಕಿತರ ಮನೆಗಳನ್ನು ಕಡ್ಡಾಯವಾಗಿ ಸೀಲ್‌ಡೌನ್ ಮಾಡಬೇಕು. 5ಕ್ಕಿಂತ ಹೆಚ್ಚಿನ ಪ್ರಕರಣಗಳು ಒಂದೇ ಪರಿಸರದಲ್ಲಿ ಕಂಡುಬಂದರೆ ಕಂಟೈನ್‌ಮೆಂಟ್‌ ವಲಯಗಳಾಗಿ ಘೋಷಿಸಿ ನಿಗಾ ವಹಿಸಬೇಕು ಎಂದರು.

ಸಂಭಾವ್ಯ ಕೋವಿಡ್ ಮೂರನೇ ಅಲೆ ಹರಡುವುದನ್ನು ನಿಯಂತ್ರಿಸಲು ಅಗತ್ಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸೋಂಕಿತರ ಚಿಕಿತ್ಸೆಗೆ 1,000 ಬೆಡ್‌ಗಳನ್ನು ಕಾಯ್ದಿರಿಸಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳು ಕಾರ್ಯಪ್ರವೃತ್ತವಾಗಬೇಕು. ಸೋಂಕಿತರನ್ನು ಕೋವಿಡ್‌ಕೇರ್ ಕೇಂದ್ರಗಳಿಗೆ ವರ್ಗಾಯಿಸಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ, ಗ್ರಾಮ ಲೆಕ್ಕಿಗರು, ಪಿಡಿಒಗಳು ಹಾಗೂ ಪೋಲಿಸ್ ಸಿಬ್ಬಂದಿ ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.

ಪ್ರತಿದಿನ ಸಂಜೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಣಾಧಿಕಾರಿಗಳು ಕೋವಿಡ್ ಸ್ಥಿತಿಗತಿ ಬಗ್ಗೆ ಸಭೆನಡೆಸಿ, ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಡಿಎಚ್‌ಒ ಡಾ.ನಾಗಭೂಷಣ ಉಡುಪ, ಎಎಸ್‌ಪಿ ಕುಮಾರ ಚಂದ್ರ, ಕುಂದಾಪುರ ಉಪವಿಭಾಗಧಿಕಾರಿ ಕೆ.ರಾಜು, ತಹಶೀಲ್ದಾರ್‌ ಪ್ರದೀಪ್‌ ಎಸ್‌.ಕುರ್ಡೆಕರ್ ಇದ್ದರು

ರೈಲು ನಿಲ್ದಾಣದಲ್ಲಿ ತಪಾಸಣಾ ಕೇಂದ್ರ
ಉಡುಪಿ, ಕುಂದಾಪುರ ಮತ್ತು ಬೈಂದೂರು ರೈಲ್ವೆ ನಿಲ್ದಾಣದಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ ತಪಾಸಣಾ ‌ಕೇಂದ್ರಗಳನ್ನು ತರೆದು, ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರನ್ನು ತಪಾಸಣೆ ನಡೆಸಬೇಕು. ಈ ತಂಡದಲ್ಲಿ ವೈದ್ಯರು, ಪೊಲೀಸರು, ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ದಂಡ ವಿಧಿಸುವ ಅಧಿಕಾರ ನೀಡಲಾಗಿದ್ದು, ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ, ಅಂತರ ಕಾಪಾಡದಿದ್ದರೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.