ADVERTISEMENT

ಮದುವೆಗೆ 50, ಶವಸಂಸ್ಕಾರಕ್ಕೆ 5 ಮಂದಿಗೆ ಅವಕಾಶ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 13:56 IST
Last Updated 27 ಏಪ್ರಿಲ್ 2021, 13:56 IST
ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿದರು.
ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿದರು.   

ಉಡುಪಿ: ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಏ.27 ರಿಂದ ಮೇ 12ರವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯಲ್ಲಿ ಕೋವಿಡ್ ಉಲ್ಬಣವಾಗುವನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರಿಗೆ ಅಧಿಕೃತ ಟಿಕೆಟ್ ಆಧಾರದ ಮೇಲೆ ಸಂಚಾರಕ್ಕೆ ಅನುಮತಿ ಕೊಡಬೇಕು. ತುರ್ತು ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಹಾಗೂ ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಬೇಕು ಎಂದರು.

ಅವಶ್ಯಕ ಮತ್ತು ತುರ್ತು ಸೇವೆ ಒದಗಿಸುವ ಸಿಬ್ಬಂದಿಗೆ ಗುರುತಿನ ಚೀಟಿ ಆಧಾರದಲ್ಲಿ ಸಂಚರಿಸಲು ಅವಕಾಶ ಇದೆ. ಗಾರ್ಮೆಂಟ್ಸ್ ಹೊರತುಪಡಿಸಿ ಎಲ್ಲ ಕೈಗಾರಿಕೆಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಗುರುತಿನ ಚೀಟಿಯ ಜತೆಗೆ ಸಂಚರಿಸಲು ಅವಕಾಶವಿದೆ.

ADVERTISEMENT

ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರು ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. ಸರಕು ಸಾಗಣೆ ವಾಹನಗಳು ಲೋಡ್ ಮತ್ತು ಅನ್‌ಲೋಡ್ ಮಾಡಿ ಸಂಚರಿಸಲು ನಿರ್ಬಂಧಗಳಿಲ್ಲ. ಸರಕು ಸಾಗಣೆ ವಾಹನಗಳನ್ನು ತಡೆಯಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ದಿನಬಳಕೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6 ರಿಂದ 10ರವರೆಗೆ ಅವಕಾಶವಿದ್ದು, ಸಾರ್ವಜನಿಕರು ಮನೆಯ ಸಮೀಪದ ಅಂಗಡಿಗಳಲ್ಲಿ ಖರೀದಿಸಬೇಕು. ಅನವಶ್ಯಕವಾಗಿ ಸಂಚರಿಸಬಾರದು. ಕೋವಿಡ್ ಲಸಿಕೆ ಪಡೆಯುವವರು ಸಮೀಪದ ಆಸ್ಪತ್ರೆಗಳಿಗೆ ತೆರಳಿ, ಲಸಿಕೆ ಪಡೆಯಲು ಅವಕಾಶವಿದೆ.

ಲಸಿಕೆ ಪಡೆಯುವ ನೆಪದಿಂದ ಅನಗತ್ಯ ಸಂಚಾರ ಮಾಡುವಂತಿಲ್ಲ. ಲಸಿಕೆ ನೀಡುವ ಕೇಂದ್ರಗಳಲ್ಲಿ ವ್ಯಕ್ತಿಗತ ಅಂತರ ಕಾಯ್ದುಕೊಂಡು ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಸಿ ಸೂಚನೆ ನೀಡಿದರು.

ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿದ್ದು, ಕಾರ್ಮಿಕರಿಗೆ ಸಂಬಂಧಪಟ್ಟ ನಿರ್ಮಾಣ ಸಂಸ್ಥೆ ಅಥವಾ ಮಾಲೀಕರು ಸೂಕ್ತ ಗುರುತಿನ ಚೀಟಿ ಒದಗಿಸಬೇಕು. ಮೀನುಗಾರಿಕೆಯನ್ನು ನಿಗಧಿತ ಅವಧಿಯೊಳಗೆ ಮಾಡಬೇಕು. ಕೃಷಿ ಚಟುವಟಿಕೆಗಳ ಮೇಲೆ ನಿರ್ಬಂಧಗಳಿಲ್ಲ. ಮದುವೆ ಕಾರ್ಯಕ್ರಮಕ್ಕೆ 50 ಮಂದಿ, ಶವ ಸಂಸ್ಕಾರಕ್ಕೆ 5 ಮಂದಿ ಮಾತ್ರ ಭಾಗವಹಿಸಲು ಅವಕಾಶವಿದೆ ಎಂದರು.

ವಿವಾಹಗಳು ನಡೆಯುವ ಜಾಗಕ್ಕೆ ಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿ, ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದೇ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜಿ.ಜಗದೀಶ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.