ADVERTISEMENT

ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ

ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ ಅನ್ವಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 15:52 IST
Last Updated 6 ಜುಲೈ 2020, 15:52 IST

ಉಡುಪಿ: ಸರ್ಕಾರದ ಆದೇಶದಂತೆ ಜುಲೈ 1ರಿಂದ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯಡಿ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯ ಜನರಲ್ ವಾರ್ಡಿನಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಸರ್ಕಾರದ ಆರೋಗ್ಯ ಯೋಜನೆ ವ್ಯಾಪ್ತಿಗೊಳಪಡದವರು ಹಾಗೂವಿಶೇಷ ವಾರ್ಡ್‌ನ ಸೌಲಭ್ಯ ಬೇಕಾದವರು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿರುವ ಮೊತ್ತವನ್ನು ಪಾವತಿಸಿ ಚಿಕಿತ್ಸೆ ಪಡೆಯಬಹುದು.

ಡಾ.ಟಿಎಂಎ ಪೈ ಆಸ್ಪತ್ರೆಯನ್ನು 2020ರ ಏ.1ರಿಂದ ಕೋವಿಡ್-19 ಚಿಕಿತ್ಸೆಗಾಗಿ ಮೀಸಲಿರಿಸಲಾಗಿದೆ. ಈ ಆಸ್ಪತ್ರೆಯನ್ನು ಉನ್ನತ ದರ್ಜೆಗೇರಿಸಿ ಕೋವಿಡ್ ಸೋಂಕಿತರಿಗೆ ತೀವ್ರ ನಿಗಾ ಘಟಕದ ಸೌಲಭ್ಯ ಹಾಗೂ ಆಮ್ಲಜನಕದ ಸಹಾಯವುಳ್ಳ ಬೆಡ್‌ಗಳ ಸೌಲಭ್ಯ ಒದಗಿಸಲಾಗಿದೆ.

ADVERTISEMENT

ಇಲ್ಲಿಯವರೆಗೂ ಆಸ್ಪತ್ರೆಗೆ ದಾಖಲಾದ ಎಲ್ಲ ರೋಗಿಗಳಿಗೆ ಜನರಲ್ ವಾರ್ಡ್‌, ಐಸಿಯು, ವೆಂಟಿಲೇಟರ್, ಜೀವ ರಕ್ಷಕ ಸಾಧನ ಮತ್ತು ಡಯಾಲಿಸಿಸ್ ಸೌಲಭ್ಯಗಳ ಸಹಿತ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ, ಮಾಹೆ ಮಣಿಪಾಲ ₹ 75 ಲಕ್ಷ ವ್ಯಯಿಸಿದೆ ಎಂದು ತಿಳಿಸಿದ್ದಾರೆ.

ಜಾಗತಿಕ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ವಿಶಿಷ್ಟ ಮಾದರಿಯಾಗಿ ಆಸ್ಪತ್ರೆ ಕಾರ್ಯ ನಿರ್ವಹಿಸಿದ್ದು ಜನಮನ್ನಣೆ ಪಡೆದಿದೆ. ಜೂನ್ 30 ರವರೆಗೆ ಡಾ.ಟಿಎಂಎ ಪೈ ಆಸ್ಪತ್ರೆಯ ಹಾಗೂ ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯ ತಜ್ಞ ವೈದ್ಯರ ತಂಡ 202 ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಿದೆ. 147 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.