ADVERTISEMENT

ಉಡುಪಿ: ಜಾನುವಾರುಗಳ ವಧೆ, ಸಾಗಾಣೆಗೆ ನಿಷೇಧ

ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 15:41 IST
Last Updated 8 ಜುಲೈ 2022, 15:41 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣೆ ತಡೆಗೆ ರಚಿಸಿರುವ ಜಿಲ್ಲಾ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣೆ ತಡೆಗೆ ರಚಿಸಿರುವ ಜಿಲ್ಲಾ ಸಮಿತಿ ಸಭೆ ನಡೆಯಿತು.   

ಉಡುಪಿ: ಜಿಲ್ಲೆಯಲ್ಲಿ ಜುಲೈ 10ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣೆ ತಡೆಗೆ ರಚಿಸಿರುವ ಜಿಲ್ಲಾ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್‌ಗಳಲ್ಲಿ ಅನಧಿಕೃತವಾಗಿ ಜಾನುವಾರು ಸಾಗಾಣೆಯಾಗದಂತೆ ನಿಗಾ ಇರಿಸಬೇಕು. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ತಿಳಿಸಿದರು.

ಅನಧಿಕೃತವಾಗಿ ಸಾಗಾಟ ಮಾಡುವ ಜಾನುವಾರುಗಳನ್ನು ವಶಪಡಿಸಿಕೊಂಡರೆ ಅವುಗಳ ರಕ್ಷಣೆಗಾಗಿ ಗುರುತಿಸಿರುವ ಗೋಶಾಲೆಗಳಲ್ಲಿ ಇರಿಸಬೇಕು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.

ADVERTISEMENT

ಬಕ್ರೀದ್ ಹಬ್ಬದ ಧಾರ್ಮಿಕ ಆಚರಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ಅನುಷ್ಠಾನಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.