ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26ಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ರಾಜ್ಯದಲ್ಲಿ ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿಯಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿರುವಂತೆ ಕ್ರೀಡಾಕೂಟಗಳಲ್ಲಿಯೂ ಕೂಡ ಹೆಸರು ಪಡೆಯುವಂತಾಗಬೇಕು ಎಂದರು.
ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಗಳಿಸಿ, ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲ ವಿದ್ಯಾರ್ಥಿಗಳ ಬೆನ್ನಿಗಿದ್ದು, ಕ್ರೀಡಾಪಟುಗಳು ಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ನಗರ ಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಕಾಪು ತಾಲ್ಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಕುಂದಾಪುರ ತಾಲ್ಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲ್ಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಡಾ.ಜಿ.ಶಂಕರ್ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಾಟ್ಕರ್ ಇದ್ದರು.
ಬಲೂನ್ ಹಾರಿಸುವ ಮೂಲಕ ಸಾಂಕೇತಿಕವಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಮ್ಯಾರಾಥಾನ್‌ಗೆ ಚಾಲನೆ
ಉಡುಪಿ: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಎಚ್.ಐ.ವಿ /ಏಡ್ಸ್ ಕುರಿತು ಜನ ಜಾಗೃತಿ ಮೂಡಿಸುವ ಜಿಲ್ಲಾ ಮಟ್ಟದ ಮ್ಯಾರಾಥಾನ್ ಹಾಗೂ ಸೈಕ್ಲಾಥಾನ್ ಕಾರ್ಯಕ್ರಮಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಭಾನುವಾರ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಡಿಎಚ್‌ಒ ಡಾ. ಬಸವರಾಜ ಹುಬ್ಬಳ್ಳಿ ಜಿಲ್ಲಾ ಶಸ್ತ್ರಚಿಕಿತ್ಸಕ ನಿತ್ಯಾನಂದ ನಾಯಕ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.