ADVERTISEMENT

103 ಡೆಂಗಿ, 11 ಮಲೇರಿಯಾ ಪ್ರಕರಣ

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 17:43 IST
Last Updated 18 ಜೂನ್ 2021, 17:43 IST
ಜಿ. ಜಗದೀಶ್‌, ಜಿಲ್ಲಾಧಿಕಾರಿ
ಜಿ. ಜಗದೀಶ್‌, ಜಿಲ್ಲಾಧಿಕಾರಿ   

ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತು ತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶುಕ್ರವಾರ ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು.

ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯಾ ಪ್ರಕರಣ ಹಾಗೂ 103 ಡೆಂಗಿ ಪ್ರಕರಣಗಳು ವರದಿಯಾಗಿವೆ. ಡೆಂಗಿ ಪ್ರಕರಣಗಳು ಹೆಚ್ಚಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ರೋಗ ತಡೆಗೆ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾದಿಕಾರಿ ಸೂಚಿಸಿದರು.

ADVERTISEMENT

ಆರೋಗ್ಯ ಇಲಾಖೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ಭೇಟಿನೀಡಿ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಬೇಕು. ಗಣಿ ಇಲಾಖೆಯಿಂದ ಗಣಿ ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಅನವಶ್ಯಕ ಕ್ವಾರಿಗಳನ್ನು ಮುಚ್ಚಬೇಕು. ಕ್ವಾರಿಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲು ಸೂಚಿಸಿದರು.

ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವಂತೆ ನಿವಾಸಿಗಳಿಗೆ ಅರಿವು ಮೂಡಿಸಬೇಕು. ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಸೊಳ್ಳೆಗಳ ಉತ್ಪತ್ತಿಯಾದಗಂತೆ ಎಚ್ಚರವಹಿಸಬೇಕು. ಬೇರೆ ರಾಜ್ಯದಿಂದ ಕಾರ್ಮಿಕರು ಬಂದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕೈಗಾರಿಕಾ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ಕಾರ್ಯಕರ್ತರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ರೋಗಗಳ ಕುರಿತು ಅರಿವು ಮೂಡಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು ಎಂದರು.

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಬರುತ್ತಿದ್ದು, ಅವರಿಗೆ ಆರೋಗ್ಯ ಪರೀಕ್ಷೆಗೆ ಒಳಪಡಿಸಬೇಕು. ಬಂದರಿನಲ್ಲಿ ಬೋಟ್‌ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚಿಸಿದರು.

ಮೀನುಗಾರಿಕಾ ಇಲಾಖೆಯಿಂದ ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬೂಷಿಯಾ ಮೀನುಗಳನ್ನು ಬೆಳೆಸಿ ಆರೋಗ್ಯ ಇಲಾಖೆಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು. ಪಂಚಾಯಿತಿಯಿಂದ ಸಾಂಕ್ರಮಿಕ ರೋಗ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.