ADVERTISEMENT

ಗ್ರಾಮ ಪಂಚಾಯಿತಿ ಸುಗಮ ಚುನಾವಣೆಗೆ ಸಜ್ಜಾಗಿ

ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 15:24 IST
Last Updated 2 ಡಿಸೆಂಬರ್ 2020, 15:24 IST
ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತಾ ಸಭೆ ನಡೆಯಿತು.
ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತಾ ಸಭೆ ನಡೆಯಿತು.   

ಉಡುಪಿ: ಜಿಲ್ಲೆಯಲ್ಲಿ ಡಿ.22 ಹಾಗೂ 27ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಸುಗಮ ಹಾಗೂ ಲೋಪಗಳಿಲ್ಲದೆ ನಡೆಯಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 22ರಂದು ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಉಡುಪಿ, ಹೆಬ್ರಿ, ಬೈಂದೂರು ಹಾಗೂ ಬ್ರಹ್ಮಾವರ ವ್ಯಾಪ್ತಿಯ 67 ಗ್ರಾಮ ಪಂಚಾಯಿತಿಗಳ 415 ಕ್ಷೇತ್ರಗಳಿಗೆ 553 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದರು.

27ರಂದು ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ಕುಂದಾಪುರ, ಕಾರ್ಕಳ ಮತ್ತು ಕಾಪು ವ್ಯಾಪ್ತಿಯ 87 ಗ್ರಾಮ ಪಂಚಾಯಿತಿಗಳ 451 ಕ್ಷೇತ್ರಗಳಿಗೆ 576 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದರು.

ADVERTISEMENT

154 ಗ್ರಾಮ ಪಂಚಾಯಿತಿಗಳ 866 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ 3,82,528 ಪುರುಷರು ಹಾಗೂ 4,12,335 ಮಹಿಳೆಯರು, 9 ಇತರೆ ಮತದಾರರು ಸೇರಿ 7,94,872 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ ಎಂದರು.

ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳು ಇರುವ ಬಗ್ಗೆ ತಹಸೀಲ್ದಾರ್‌ಗಳು ಪರಿಶೀಲಿಸಿ ವರದಿ ನೀಡಬೇಕು. ಮತಗಟ್ಟೆಯ ದುರಸ್ತಿ ಕಾರ್ಯ ನಡೆಸಬೇಕು. ಕೋವಿಡ್ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಚುನಾವಣಾ ಕಾರ್ಯಕ್ಕಾಗಿ 155 ಚುನಾವಣಾಧಿಕಾರಿಗಳು ಮತ್ತು 166 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದ್ದು, ಅಗತ್ಯವಿರುವ ಸಿಬ್ಬಂದಿ ಕುರಿತು ವಿವರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಅನಿರೀಕ್ಷಿತ ಸಮಾರಂಭಗಳ ಕುರಿತು ಪರಿಶೀಲಿಸಿ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದಲ್ಲಿ ಕೂಡಲೇ ಸಂಬಂಧಪಟ್ಟವರ ವಿರುದ್ದ ಪ್ರಕರಣ ದಾಖಲಿಸಬೇಕು. ಮದ್ಯ ಮಾರಾಟ ಪ್ರಮಾಣವನ್ನು ಪ್ರತಿದಿನ ಪರಿಶೀಲಿಸಬೇಕು ಎಂದುಅಬಕಾರಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಅಗತ್ಯ ಪೊಲೀಸ್ ಸಿಬ್ಬಂದಿ ನೇಮಿಸಿ. ಗ್ರಾಮಗಳಲ್ಲಿ ಗಲಾಟೆ, ಘರ್ಷಣೆಗಳು ನಡೆಯದಂತೆ ಎಚ್ಚರ ವಹಿಸಿ, ನೀತಿ ಸಂಹಿತೆ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಚುನಾವಣಾ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ನೀತಿ ಸಂಹಿತೆ ವಿವರಗಳನ್ನು ಅಧಿಕಾರಿಗಳು ಅಥೈಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ಕೆ.ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.