ADVERTISEMENT

ಏಕ ವಿನ್ಯಾಸ ನಕ್ಷೆ | ಸುತ್ತೋಲೆಯಂತೆ ನೀಡಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 5:52 IST
Last Updated 3 ಆಗಸ್ಟ್ 2025, 5:52 IST
<div class="paragraphs"><p>ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11ರ ಸಮಸ್ಯೆಗಳ ಬಗ್ಗೆ ಸಭೆ ನಡೆಯಿತು</p></div>

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11ರ ಸಮಸ್ಯೆಗಳ ಬಗ್ಗೆ ಸಭೆ ನಡೆಯಿತು

   

ಉಡುಪಿ: ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಸರ್ಕಾರ ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸೂಚಿಸಿ ಸುತ್ತೋಲೆ ಹೊರಡಿಸಿದೆ. ನಿಯಮಾನುಸಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು  ಶನಿವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

ಕರಾವಳಿ ಪ್ರದೇಶಗಳ ಭೌಗೋಳಿಕ ಲಕ್ಷಣಗಳಿಂದಾಗಿ ಹಲವು ಸಂದರ್ಭಗಳಲ್ಲಿ ರಸ್ತೆಯನ್ನು ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ವಿನ್ಯಾಸ ಅನುಮೋದನೆ ಸಮಯದಲ್ಲಿ ವಿನಾಯಿತಿ ನೀಡಲು ಅವಕಾಶ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದರನ್ವಯ ನಿಯಮಾನುಸಾರ ಅನುಮೋದನೆಯನ್ನು ನೀಡಬೇಕು ಎಂದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಮನೆ ಕಟ್ಟಲು ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯಲು ನಗರ ಯೋಜನಾ ಪ್ರಾಧಿಕಾರದಲ್ಲಿ ಆಗುವುದಿಲ್ಲ ಎಂದು ಜನರ ಮನಸ್ಸಿನಲ್ಲಿ ಇದೆ. ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಕಂಡು ಬರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಪರಿಹಾರ ಕಂಡುಕೊಂಡು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯಲು ತೊಂದರೆಯಾಗುತ್ತಿದೆ ಎಂಬ ದೂರುಗಳು ಜನರಿಂದ ಕೇಳಿ ಬರುತ್ತಿವೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರ ಮತ್ತು ಗ್ರಾಮಾಂತರ ಇಲಾಖೆಯ ಸಹಾಯಕ ನಿರ್ದೇಶಕಿ ರಮ್ಯಾ ಭಾಗವಹಿಸಿದ್ದರು.

‘ಅಧಿಕಾರಿಗಳು ಇಚ್ಛಾಶಕ್ತಿ ಪ್ರದರ್ಶಿಸಿ’

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಡಿಕೇರಿ ಜಿಲ್ಲೆಗಳಲ್ಲಿ ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಸರ್ಕಾರ ಹಲವು ವಿನಾಯಿತಿಗಳನ್ನು ನೀಡಿ, ಈ ಹಿಂದೆ ಸುತ್ತೋಲೆಯನ್ನು ಹೊರಡಿಸಿದೆ. ಅದರನ್ವಯ ಏಕ ವಿನ್ಯಾಸ ನಕ್ಷೆಗೆ ಅನುಮೋದನೆಯನ್ನು ನೀಡಿದರೆ ಜಿಲ್ಲೆಯಲ್ಲಿ ಈ ಸಮಸ್ಯೆ ಅರ್ಧದಷ್ಟು ಬಗೆಹರಿಯುತ್ತದೆ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.

ಅಧಿಕಾರಿಗಳು ಈ ಕಾರ್ಯವನ್ನು ಇಚ್ಛಾಶಕ್ತಿಯಿಂದ ಮಾಡುವುದರೊಂದಿಗೆ ಜನರಿಗೆ ನೆರವಾಗಬೇಕು. ಸರ್ಕಾರದ ಸುತ್ತೋಲೆಗಳನ್ನು ತಮ್ಮ ಇಚ್ಛೆಗೆ ಅನುಸಾರವಾಗಿ ಅರ್ಥೈಸಿಕೊಳ್ಳುವುದು ತಪ್ಪು ಎಂದರು.

ಸಾರ್ವಜನಿಕರು ಆಸ್ತಿ ಖರೀದಿ ಮಾಡಿ, ಕ್ರಯಪತ್ರವಾಗುವ ಸಂದರ್ಭದಲ್ಲಿ ಭೂಮಿಯ ಪೂರ್ತಿ ಭಾಗಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳುತ್ತಾರೆ. ಆದರೆ ಅದರಲ್ಲಿ ರಸ್ತೆಯ ಜಾಗವೂ ಒಳಗೊಂಡಿರುತ್ತದೆ. ಇದು ಸರಿಯಲ್ಲ ಎಂದು ಸುನಿಲ್‌ ಕುಮಾರ್ ಹೇಳಿದರು.

ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನರು ಸಲ್ಲಿಸಿರುವ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು
ಸ್ವರೂಪ ಟಿ.ಕೆ., ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.