ಉಡುಪಿ: 2024ನೇ ಸಾಲಿನ ಗುಲ್ವಾಡಿ ವೆಂಕಟರಾವ್ ಪ್ರಶಸ್ತಿಗೆ ಲೇಖಕಿ ಹಾಗೂ ಪೊಲೀಸ್ ಅಧಿಕಾರಿ ಧರಣಿದೇವಿ ಮಾಲಗತ್ತಿ ಹಾಗೂ ಸಂತೋಷ ಕುಮಾರ್ ಗುಲ್ವಾಡಿ ಪ್ರಶಸ್ತಿಗೆ ಲೇಖಕ ಹಾಗೂ ವಾಣಿಜ್ಯ ತೆರಿಗೆಗಳ ಉಪ ಆಯುಕ್ತ ಮೊಹಮ್ಮದ್ ರಫೀ ಪಾಷ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಗಳು ತಲಾ ₹10 ಸಾವಿರ ನಗದು ಒಳಗೊಂಡಿದ್ದು, ಇದೇ 13 ರಂದು ಉಡುಪಿ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
13 ರಂದು ನಡೆಯುವ ಕಾರ್ಯಕ್ರಮದಲ್ಲಿ ಗುಲ್ವಾಡಿ ವೆಂಕಟರಾವ್ ಅವರ ಕನ್ನಡದ ಮೊದಲ ಸಾಮಾಜಿಕ ಕಾದಂಬರಿ ಇಂದಿರಾ ಬಾಯಿ ಕೃತಿಯಲ್ಲಿನ ಮಹಿಳಾ ಸಾಮಾಜಿಕ ಸ್ಥಿತ್ಯಂತರಗಳು ವಿಷಯದ ಕುರಿತು ವಿಚಾರಗೋಷ್ಠಿ ಕೂಡ ನಡೆಯಲಿದೆ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಅಂದು ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್, ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಗಣನಾಥ ಎಕ್ಕಾರು, ಅಜ್ಜರಕಾಡು ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸೋಜಾನ್ ಕೆ.ಜಿ. ಉಪಸ್ಠಿತರಿರುವರು ಎಂದರು.
ಬೆಳಿಗ್ಗೆ 11.15 ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದೂ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ, ಯಾಕೂಬ್ ಖಾದರ್ ಗುಲ್ವಾಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.