ADVERTISEMENT

ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಪಾವತಿ

ಜಿಲ್ಲಾ ಪಂಚಾಯಿತಿ ಸಿಇಒ ಎಚ್‌.ಪ್ರಸನ್ನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 14:13 IST
Last Updated 1 ಅಕ್ಟೋಬರ್ 2022, 14:13 IST
ಉಡುಪಿ ತಾಲ್ಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಚಾಲನೆ ನೀಡಿದರು.
ಉಡುಪಿ ತಾಲ್ಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಚಾಲನೆ ನೀಡಿದರು.   

ಉಡುಪಿ: ಸಾರ್ವಜನಿಕರು ಗ್ರಾಮ ಪಂಚಾಯಿತಿಗಳಿಗೆ ಪಾವತಿಸಬೇಕಿರುವ ತೆರಿಗೆ ಹಾಗೂ ಇತರ ಶುಲ್ಕಗಳನ್ನು ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ತಿಳಿಸಿದರು.

ಉಡುಪಿ ತಾಲ್ಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಿ ಮಾತನಾಡಿ, ನಾಗರಿಕರು ತೆರಿಗೆಗಳು, ಶುಲ್ಕಗಳನ್ನು ಗ್ರಾಮ ಪಂಚಾಯಿತಿಗಳಿಗೆ ನಗದು ರೂಪದಲ್ಲಿ ಬದಲಾಗಿ ಡಿಜಿಟಲ್ ರೂಪದಲ್ಲಿ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಗ್ರಾಮ ಪಂಚಾಯಿತಿಗಳಿಗೆ ಇ-ಪೇ, ಫೋನ್ ಪೇ, ಪೇಟಿಎಂ, ಭೀಮ್, ರೂಪಿಯಾ ಸೇರಿದಂತೆ ಹಲವು ಡಿಜಿಟಲ್ ಪಾವತಿ ವಿಧಾನಗಳನ್ನು ಒದಗಿಸಲಾಗಿದೆ. ಇವುಗಳಲ್ಲಿ ಯಾವುದಾದರೂ ಒಂದು ವಿಧಾನವನ್ನು ಬಳಸಿ ಡಿಜಿಟಲ್ ಪಾವತಿ ಮಾಡಬೇಕು. ಸ್ವೈಪಿಂಗ್ ಯಂತ್ರಗಳನ್ನೂ ಗ್ರಾಮ ಪಂಚಾಯತ್‌ಗಳಿಗೆ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ADVERTISEMENT

ಸರ್ಕಾರ ನಗದು ರಹಿತ ಡಿಜಿಟಲ್ ವ್ಯವಸ್ಥೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆ ಜಾರಿಗೆ ಇಲಾಖೆ ಮುಂದಾಗಿದೆ.ಇದರಿಂದ ಸಾರ್ವಜನಿಕರಿಗೂ ಹಾಗೂ ಗ್ರಾಮ ಪಂಚಾಯತಿಗಳಿಗೂ ಅನುಕೂಲವಾಗುವುದರ ಜೊತೆಗೆ ಆರ್ಥಿಕ ವ್ಯವಹಾರ ಹೆಚ್ಚು ಪಾರದರ್ಶಕವಾಗಿರಲಿದೆ ಎಂದರು.

ಸಾರ್ವಜನಿಕರು ಸುರಕ್ಷತೆಯೊಂದಿಗೆ ಡಿಜಿಟಲ್ ಪಾವತಿಗೆ ಹೆಚ್ಚು ಒತ್ತು ನೀಡಬೇಕು. ಇದಕ್ಕೆ ಪೂರಕವಾಗಿ ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳಲ್ಲಿ ನೆಟ್‌ವರ್ಕ್‌ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸೇವಾ ಶುಲ್ಕ ಇಲ್ಲದೆ ಡಿಜಿಟಲ್ ಹಣ ಪಾವತಿಗೆ ಉಪಕರಣಗಳನ್ನು ಉಚಿತವಾಗಿ ಒದಗಿಸಿರುವ ಕೆನರಾ ಬ್ಯಾಂಕ್‌ಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ದೇವಾಡಿಗ, ಕೆನರಾ ಬ್ಯಾಂಕ್‌ನ ಜನರಲ್ ಮ್ಯಾನೆಜರ್ ಶ್ರೀರಾಮ ನಾಯ್ಕ, ವಿಭಾಗೀಯ ಮ್ಯಾನೆಜರ್ ಲೀನಾ ಪಿಂಟೋ, ಸಹಾಯಕ ಜನರಲ್ ಮ್ಯಾನೆಜರ್ ಸಂಜೀವ್, ಲೀಡ್ ಬ್ಯಾಂಕ್ ಮ್ಯಾನೆಜರ್ ಪಿ.ಎಂ.ಪಿಂಜಾರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೀತಾ ಇದ್ದರು.

ಕಾರ್ಯಕ್ರಮದ ನಂತರ ಕಲ್ಯಾಣಪುರ ಗ್ರಾಮ ಪಂಚಾಯಿತಿಯ ಕಚೇರಿ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ, ಸಂಜೀವಿನಿ ಸಂಘದ ಕಚೇರಿಗೆ ಹಾಗೂ ಅಗಸನಕೆರೆ ಅಭಿವೃದ್ಧಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.