ADVERTISEMENT

ಬಾಲನ್ಯಾಯ ಕಾಯ್ದೆ ಕುರಿತು ತರಬೇತಿ |ಮಕ್ಕಳ ಸುರಕ್ಷತೆಗಿರಲಿ ಆದ್ಯತೆ-ತಿಪ್ಪೇಸ್ವಾಮಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2026, 6:35 IST
Last Updated 22 ಜನವರಿ 2026, 6:35 IST
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು   

ಉಡುಪಿ: ಮಕ್ಕಳ ರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಶೇಕಡಾ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಂಯುಕ್ತ ಆಶ್ರಯದಲ್ಲಿ ಪೋಕ್ಸೊ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಶಾಲೆಗೆ ಬಂದು ಮರಳಿ ಮನೆಗೆ ಹೋಗುವವರೆಗೆ ಶಿಕ್ಷಕರು ಅವರ ಕಾನೂನಾತ್ಮಕ ಪೋಷಕರಾಗಿರುತ್ತಾರೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಬೇಕು ಎಂದು ತಿಳಿಸಿದರು.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾ ಕಾನೂನು ಅನುಷ್ಠಾನ ಉತ್ತಮವಾಗಿದೆ. ಮುಂದಿನ ವರ್ಷದಿಂದ ಶಾಲಾ-ಕಾಲೇಜುಗಳಲ್ಲಿ ನಿಯಮಿತವಾಗಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ರಾಜ್ಯ ಸರ್ಕಾರವು ಮಕ್ಕಳ ರಕ್ಷಣಾ ನೀತಿ 2016 ಕ್ಕೆ ತಿದ್ದುಪಡಿ ತಂದು 2023ರಲ್ಲಿ ಪರಿಷ್ಕರಿಸಿ ಅದನ್ನು ರಾಜ್ಯದಾದ್ಯಂತ ಅನುಷ್ಠಾನಗೊಳಿಸಿದೆ. ಈ ನೀತಿಯು ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ, ಅಪರಾಧ ತಡೆಗಟ್ಟುವುದು, ಮತ್ತು ಬಾಲ ನ್ಯಾಯ ಕಾಯ್ದೆ 2015ರ ಅಂಶಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಈ ನೀತಿಯನ್ವಯ ರಾಜ್ಯದ 31 ಜಿಲ್ಲೆಗಳ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಆಯಾ ಶಾಲೆಯ ಒಂದು ಶಿಕ್ಷಕರು ಮತ್ತು ಎರಡು ವಿದ್ಯಾರ್ಥಿಗಳನ್ನು ಮಕ್ಕಳ ರಕ್ಷಣಾಧಿಕಾರಿಯಾಗಿ ನೇಮಿಸಲಾಗಿದೆ. ಸರ್ಕಾರವು ರೂಪಿಸುವ ನೀತಿಗಳು ತಳಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎನ್ನುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲ ವೈ.ಟಿ. ರಾಘವೇಂದ್ರ ಬಾಲ ನ್ಯಾಯ ಕಾಯ್ದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ, ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಉಪಸ್ಥಿತರಿದ್ದರು.

ADVERTISEMENT
ಮಕ್ಕಳ ರಕ್ಷಣಾಧಿಕಾರಿಗಳಿಗೆ ಬಾಲ ನ್ಯಾಯ ಕಾನೂನಿನ ಅರಿವು ಇರಬೇಕು. ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾದ ತರಬೇತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ವಿಸ್ತರಿಸಲಾಗುವುದು
ಡಾ. ತಿಪ್ಪೇಸ್ವಾಮಿ ಕೆ.ಟಿ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.