
ಉಡುಪಿ: ನಿವೃತ್ತ ಪೊಲೀಸ್ ಸಿಬ್ಬಂದಿಗೆ ಸಿಗುತ್ತಿರುವ ವೈದ್ಯಕೀಯ ಸೌಲಭ್ಯಗಳು ಸೀಮಿತ ಆಸ್ಪತ್ರೆಗಳಲ್ಲಿ ಮಾತ್ರ ಸಿಗುತ್ತಿದ್ದು, ಮಣಿಪಾಲದ ಕೆಎಂಸಿ ಹಾಗೂ ಟಿಎಂಎ ಪೈ ನಂತಹ ಆಸ್ಪತ್ರೆಗಳಲ್ಲಿಯೂ ಸಿಗುವಂತಾಗಬೇಕು ಎಂದು ಸಶಸ್ತ್ರ ಮೀಸಲು ಪಡೆಯ ನಿವೃತ್ತ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಎ.ಚಂದ್ರಶೇಖರ್ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಶುಕ್ರವಾರ ಚಂದು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸಾಧ್ಯವಾಗುವುದಿಲ್ಲ. ಸಿಬ್ಬಂದಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಎಸ್‌ಪಿ ಎನ್.ವಿಷ್ಣುವರ್ಧನ್ ಮಾತನಾಡಿ, 2020-21ನೇ ಸಾಲಿನಲ್ಲಿ 52 ಮಂದಿ ನಿವೃತ್ತ ಪೊಲೀಸರಿಗೆ ₹ 4.64 ಲಕ್ಷ ವೈದ್ಯಕೀಯ ನೆರವು ನೀಡಲಾಗಿದೆ. ಪೊಲೀಸ್ ಸಹಕಾರಿ ಸಂಘದಿಂದ ಇದುವರೆಗೆ 1,016 ಮಂದಿಗೆ ಸಾಲ ವಿತರಿಸಲಾಗಿದ್ದು, ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳಿಗೆ ಬೆಂಬಲ ನೀಡಲಾಗುತ್ತಿದೆ ಎಂದರು.
2020ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಉಡುಪಿಯ ಸೆನ್ ಠಾಣೆಯ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಶಸ್ತ್ರ ಮೀಸಲು ಪಡೆಯ ಶಂಕರ್ ಅವರಿಗೆ ಎಂದು ಎಸ್ಪಿ ಅಭಿನಂದಿಸಿದರು.
ಸಶಸ್ತ್ರ ಮೀಸಲು ಪಡೆಯ ಐದು ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.