ADVERTISEMENT

ಮಕ್ಕಳಿಗೆ ಉತ್ತಮ ವೇದಿಕೆ ಕಲ್ಪಿಸಿ: ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್

ಮಕ್ಕಳ ದಿನಾಚರಣೆ, ಪೋಷಕ– ಶಿಕ್ಷಕರ ಮಹಾಸಭೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 5:57 IST
Last Updated 15 ನವೆಂಬರ್ 2025, 5:57 IST
ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ  ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು
ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ  ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು   

ಉಡುಪಿ: ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸುವ ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ವೇದಿಕೆ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪಂಡಿತ್ ಜವಾಹರಲಾಲ್ ನೆಹರು ಜನ್ಮ ದಿನಾಚರಣೆ ಅಂಗವಾಗಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ದೇಶದ ಆಸ್ತಿಯಾಗಿದ್ದು, ಅವರನ್ನು ಜಾಗತಿಕ ಮಟ್ಟದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಹೊಣೆ ಶಿಕ್ಷಕರ ಹಾಗೂ ಪೋಷಕರ ಮೇಲೆ ಇದೆ. ವಿದ್ಯಾರ್ಥಿಗಳು ಪಠ್ಯ ಹಾಗೂ ಸೃಜನಶೀಲ ಪಠ್ಯೇತರ ಚಟುವಟಿಕೆಗಳ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.

ADVERTISEMENT

ಮಕ್ಕಳಲ್ಲಿ ಬಡವ ಶ್ರೀಮಂತನೆಂದು ಯಾವುದೇ ತಾರತಮ್ಯ ಮಾಡಬಾರದು. ನಾವೆಲ್ಲ ಸಮಾನರು ಎಂಬ ಭಾವನೆ ಮೂಡಬೇಕು. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಚೆನ್ನಾಗಿ ಓದಿ ಉನ್ನತ ಮಟ್ಟಕ್ಕೆ ತಲುಪಬೇಕು. ಹಾಗಾಗಿ ಸರ್ಕಾರ ಉಚಿತ ಪುಸ್ತಕ, ಸಮವಸ್ತ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ ಎಂದರು.

ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ವೀಣಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣಾಧಿಕಾರಿ ಗಿರಿಜಮ್ಮ, ಎಸ್.ಡಿ.ಎಂ.ಸಿ ಸದಸ್ಯರಾದ ಪ್ರಕಾಶ್ ರಾವ್, ಪ್ರದೀಪ್ ರಾಣೆ, ವನಿತ ಆಚಾರ್ಯ, ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ದಿವಾಕರ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕ ಹರಿಶ್ಚಂದ್ರ ಬಾಯಿರಿ ನಿರೂಪಿಸಿದರು. ಲಲಿತ ವಂದಿಸಿದರು.

‘ಶಾಲೆಯ ಪ್ರಗತಿಗೂ ಕೈಜೋಡಿಸಿ

’ ಉಡುಪಿ: ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇವುಗಳ ಜಂಟಿ ಆಶ್ರಯದಲ್ಲಿ ಪೋಷಕರ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮಣಿಪಾಲದ ರಾಜೀವನಗರ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಎಲ್ಲಾ ಪೋಷಕರು ಶಾಲೆಯ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸುವುದರೊಂದಿಗೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಸ್ಪರ್ಧಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 80 ಬಡಗಬೆಟ್ಟು ಗ್ರಾಮ ಪಂಚಾಯಿತಿ ಸದಸ್ಯೆ ಪ್ಲೋಸಿ ಫೆರ್ನಾಂಡಿಸ್ ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಸುಮಿತ್ರ ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿ ಎಸ್.ಡಿ.ಎಂ.ಸಿ.ಗಳ ತಾಲ್ಲೂಕು ಕಾರ್ಯದರ್ಶಿ ಮಮತಾ ಉಪಸ್ಥಿತರಿದ್ದರು ಸಂಜೀವ ನಾಯಕ್ ನಿರೂಪಿಸಿದರು. ವಿನೋದ ವಂದಿಸಿದರು.