ಉಡುಪಿ: ಇಂದು ಶಿಕ್ಷಣ ಎಂದರೆ ಕೇವಲ ಡಾಕ್ಟರ್, ಎಂಜಿನಿಯರ್ ಮಾತ್ರವೆಂದು ವಿದ್ಯಾರ್ಥಿಗಳ ಮನಸ್ಸಿನಲ್ಲಿದೆ. ಇದರಿಂದ ನಾವು ನಮ್ಮ ಸ್ವಂತ ಚಿಂತನೆಯನ್ನು ಕಳೆದುಕೊಳ್ಳುತ್ತಿದ್ದೇವೆ. ವಿದ್ಯಾರ್ಥಿಗಳು ಸ್ವಂತಿಕೆ ಅರಳಿಸುವ ಕ್ಷೇತ್ರವನ್ನು ಆಯ್ದುಕೊಳ್ಳಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ಸಲಹೆ ನೀಡಿದರು.
ಯಕ್ಷಗಾನ ಕಲಾರಂಗದ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ, ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ವಿನಮ್ರ ಸಹಾಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಏಕಮುಖ ಚಿಂತನೆಯಿಂದ ಸಮಾಜದ ಸಮತೋಲನ ತಪ್ಪಿ ಹೋಗುತ್ತದೆ. ವಿದ್ಯಾಭ್ಯಾಸ ಎಂದರೆ ನಮ್ಮೊಳಗಿನ ಸಹಜವಾದ ಒಲವಿನ ಕಡೆಗೆ ಹೋಗಬೇಕು. ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ, ಸಾಮರ್ಥ್ಯ ಅರಳಿಸುವ ಕ್ಷೇತ್ರಗಳತ್ತ ಮುಖ ಮಾಡಬೇಕು ಎಂದರು.
ಸ್ವಂತ ಚಿಂತನೆ ಬೆಳೆಸಿಕೊಂಡರೆ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿ ದೆಸೆಯಲ್ಲಿ ಸರಿಯಾದ ಮಾರ್ಗದರ್ಶನ ಸಿಕ್ಕಿದರೆ ಬದುಕಿನಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಎಲ್ಲರೂ ಒಂದೇ ದಾರಿಯಲ್ಲಿ ಹೋದರೆ ಉಳಿದ ದಾರಿಗಳು ಮುಚ್ಚುತ್ತವೆ. ಇಂದು ನಮ್ಮ ಹಳ್ಳಿಗಳಲ್ಲಿ ಕೃಷಿ ಮಾಡುವವರೇ ಇಲ್ಲವಾಗಿದ್ದಾರೆ. ಹಲವು ಸಂಸ್ಥೆಗಳಿಗೆ ನೌಕರರೇ ಸಿಗುತ್ತಿಲ್ಲ ಎಂದು ಹೇಳಿದರು.
ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಮೂಲಕ ಯಕ್ಷಗಾನ ಕಲಾರಂಗವು ಮಾದರಿ ಕೆಲಸ ಮಾಡುತ್ತಿದೆ ಎಂದರು.
ಡಾ.ಜಿ.ಎಸ್. ಚಂದ್ರಶೇಖರ್ ಮಾತನಾಡಿ, ಬಡತನ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಉದ್ಯಮಿ ಆನಂದ ಸಿ. ಕುಂದರ್, ಡಾ.ಪಿ.ಎಸ್. ಗುರುಮೂರ್ತಿ, ಪಿ. ಸುರೇಶ್ ನಾಯಕ್, ಎಂ.ಆರ್.ಹೆಗಡೆ, ಪಿ. ಸದಾನಂದ ಶೆಣೈ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೇಕಾರ್, ಅಧ್ಯಕ್ಷ ಎಂ. ಗಂಗಾಧರ ರಾವ್ ಭಾಗವಹಿಸಿದ್ದರು.
ಮನುಷ್ಯ ಲೌಕಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸಾಧನೆ ಮಾಡಬೇಕು ಹಾಗಿದ್ದರೆ ಮಾತ್ರ ಬದುಕು ಪರಿಪೂರ್ಣವಾಗುತ್ತದೆ. ವಿದ್ಯಾದಾನವು ಅತ್ಯಂತ ಶ್ರೇಷ್ಠವಾದ ದಾನವಾಗಿದೆ-ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ
ವಿದ್ಯೆಯ ಜೊತೆಗೆ ಸಂಸ್ಕಾರವೂ ಅಗತ್ಯ. ಸಮಾಜದಿಂದ ಪಡೆದ ಸಹಾಯವನ್ನು ಮರಳಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಸ್ವಚ್ಛ ಮನಸ್ಸು ಸರಿಯಾದ ದೃಷ್ಟಿಕೋನ ಇರಬೇಕು-ಸುಗುಣೇಂದ್ರತೀರ್ಥ ಸ್ವಾಮೀಜಿ, ಪುತ್ತಿಗೆ ಮಠಾಧೀಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.