
ಉಡುಪಿ: ಕರ್ನಾಟಕ ಸರ್ಕಾರ ಸೂಕ್ತ ನೆರವು ನೀಡಿದರೆ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಎರ್ಮಾಳಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕೋರಿಕೆಯ ಮೇರೆಗೆ ಸಂಸದರು ಎರ್ಮಾಳಿನಲ್ಲಿ ನೂತನ ವಿಮಾನ ನಿಲ್ದಾಣ ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಉಡಾನ್ ಯೋಜನೆಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿ ಮತ್ತು ಸುಧಾರಣೆಗಾಗಿ ಕೇಂದ್ರದ ಸಹಕಾರ ನೀಡಲು ಸಮ್ಮತಿ ಇದ್ದು, ಸೂಕ್ತವಾದ ಸ್ಥಳವನ್ನು ಗುರುತಿಸಿ, ಯೋಜನೆಯ ಕಾರ್ಯ ಸಾಧ್ಯತೆಯ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಸಚಿವರು ಸಲಹೆ ನೀಡಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಭಾರತ ಸರಕಾರದ ಗ್ರೀನ್ ಫೀಲ್ಡ್ ನೀತಿಯಂತೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಸಚಿವರು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದೂ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.