
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತಗಳವು ಮಾಡುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಶನಿವಾರ ಮಾನವ ಸರಪಳಿ ರಚಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ನಿಕೇತ್ ರಾಜ್ ಮಾರ್ಯ, ‘ನಮ್ಮ ದೇಶಕ್ಕೆ ಬೇಕಾಗಿರುವುದು ಸಂವಿಧಾನ ಮಾತ್ರ, ಅದು ಉಳಿಯಬೇಕಾದರೆ ಚುನಾವಣೆಗಳು ನ್ಯಾಯ ಸಮ್ಮತವಾಗಿ ನಡೆಯಬೇಕು’ ಎಂದರು.
‘ಮತದಾನವು ನಮ್ಮ ಹಕ್ಕು. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನಮ್ಮ ಈ ಹಕ್ಕನ್ನು ಕಸಿಯಲು ಪ್ರಯತ್ನಿಸುತ್ತಿದೆ’ ಎಂದು ಹೇಳಿದರು.
‘ಜಾತಿ, ಧರ್ಮ, ದೇವರ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಮೂಲಕ ಬಿಜೆಪಿಯು ಸಂವಿಧಾನವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ. ಸಂವಿಧಾನ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ’ ಎಂದರು.
‘ಸಂವಿಧಾನವು ಬಡವರ ಕನಸುಗಳನ್ನು ನನಸು ಮಾಡಿದೆ. ಸಂವಿಧಾನ ನಾಶವಾದರೆ ಬಡವರ ಕನಸುಗಳೂ ನುಚ್ಚುನೂರಾಗಲಿದೆ ಎಂದು ಹೇಳಿದರು.
ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಮಾತನಾಡಿ, ‘ಕೇಂದ್ರ ಸರ್ಕಾರವು ಮತದಾನದ ಹಕ್ಕನ್ನು ಕಸಿಯುತ್ತಿರುವುದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಇಂದು ಚುನಾವಣಾ ಆಯೋಗವನ್ನು ಮಾತ್ರವಲ್ಲ ಇ.ಡಿ., ಸಿಬಿಐ ಮೊದಲಾದ ಪ್ರಜಾಪ್ರಭುತ್ವದ ಅಸ್ತ್ರಗಳನ್ನು ಶಿಥಿಲಗೊಳಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.
ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಮುಖಂಡರಾದ ಎಂ.ಎ. ಗಫೂರ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮಂಜುನಾಥ ಪೂಜಾರಿ, ಜಯಪ್ರಕಾಶ್ ಹೆಗ್ಡೆ, ದಿನಕರ ಹೇರೂರು, ಸೋನಿಯಾ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಾಜು ಪೂಜಾರಿ, ಪ್ರಸಾದ್ ರಾಜ್ ಕಾಂಚನ್ˌ ದಿನೇಶ್ ಹೆಗ್ಡೆ ಮೊಳವಳ್ಳಿ, ಹರಿಪ್ರಸಾದ್ ರೈ ಇದ್ದರು.
ಜಿಲ್ಲಾ ಕಾಂಗ್ರಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ನಾಗೇಶ್ ಕುಮಾರ್ ಉದ್ಯಾವರ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.