ADVERTISEMENT

‘ಗಾಂಧಿ, ಶಾಸ್ತ್ರಿ ಆದರ್ಶ ಅಳವಡಿಸಿಕೊಳ್ಳಿ’

ಗಾಂಧಿ, ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 5:29 IST
Last Updated 3 ಅಕ್ಟೋಬರ್ 2025, 5:29 IST
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿದರು
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿದರು   

ಪ್ರಜಾವಾಣಿ ವಾರ್ತೆ

ಉಡುಪಿ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮೌಲಿಕ ಜೀವನವನ್ನು ನಡೆಸಿ ವಿಶ್ವಕ್ಕೆ ಮಾದರಿಯಾದವರು. ಅವರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿಯೂ ಅಳವಡಿಸಿಕೊಂಡು ಮೌಲ್ಯಯುತವಾಗಿ ಬಾಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಜಿಲ್ಲಾಡಳಿತ, ನಗರಸಭೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ನ ಗಾಂಧಿ ಕಟ್ಟೆಯಲ್ಲಿ ಗುರುವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

ಮಹಾತ್ಮ ಗಾಂಧಿ ಅವರು ರಾಷ್ಟ್ರಪಿತರೆಂದು ಮಾನ್ಯರಾದವರಾದರೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ‘ಜೈ ಜವಾನ್ ಜೈ ಕಿಸಾನ್’ ಘೋಷಣೆಯನ್ನು ನೀಡಿದವರು. ಇಂತಹ ಉನ್ನತ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕವಾಗಿ ಮಾದರಿ ಎನಿಸಿರುವ ಉಡುಪಿ ಜಿಲ್ಲೆಗೂ ಗಾಂಧೀಜಿ ಅವರಿಗೂ ಗಾಢವಾದ ನಂಟಿದೆ. ಗಾಂಧೀಜಿಯವರು ದೇಶದಾದ್ಯಂತ ಸಂಚರಿಸುತ್ತಿದ್ದಾಗ 1934ರಲ್ಲಿ ಜಿಲ್ಲೆಗೂ ಭೇಟಿ ನೀಡಿ ಅಜ್ಜರಕಾಡಿನಲ್ಲಿ ಸ್ವಾತಂತ್ರ್ಯ ಸೇನಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದರು ಎಂದು ಹೇಳಿದರು.

ಗಾಂಧೀಜಿ ಅವರ ಭೇಟಿಯ ನೆನಪಿಗಾಗಿ ಅವರ ಪುತ್ಥಳಿಯನ್ನು ಅಜ್ಜರಕಾಡಿನಲ್ಲಿ ಸ್ಥಾಪಿಸಿ, ಅವರ ಆದರ್ಶಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮ  ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಗಾಂಧೀಜಿ ಅವರ ಆಶಯದಂತೆ ಇಂದು ದೇಶವು ಬಹಳಷ್ಟು ಬದಲಾವಣೆಗಳನ್ನು ಕಂಡಿದ್ದು ಆರ್ಥಿಕತೆಯಲ್ಲಿ ವಿಶ್ವದಲ್ಲೇ ನಾಲ್ಕನೇ ಸ್ಥಾನವನ್ನು ಹೊಂದಿದೆ. ಕೃಷಿ ಕ್ಷೇತ್ರದಿಂದ ಹಿಡಿದು ಆರೋಗ್ಯ, ಕ್ರೀಡೆ, ರಕ್ಷಣಾ ಕ್ಷೇತ್ರ, ತಂತ್ರಜ್ಞಾನ, ಬಾಹ್ಯಾಕಾಶ ಸಂಶೋಧನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಭಾರತದ ಸಾಧನೆ ವಿಶ್ವದ ಗಮನವನ್ನು ಸೆಳೆಯುವಲ್ಲಿ ಸಫಲವಾಗಿದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾತನಾಡಿ, ಗಾಂಧೀಜಿಯವರ ಆಶಯದಂತೆ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಸ ಸಂಗ್ರಹಿಸಲು ಬರುವ ಪೌರಕಾರ್ಮಿಕರಿಗೆ ಸಾರ್ವಜನಿಕರು ತಮ್ಮ ಮನೆಯ ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಣೆ ಮಾಡಿ ನೀಡಬೇಕು. ಇದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಇದರಿಂದ ಕಸವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಬಿ., ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಮಣಿಪಾಲ್ ಇದ್ದರು.

Highlights - ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.