ಉಡುಪಿ: ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು. ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತವೆ.
ವಿಗ್ರಹಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ.
ಸಾರ್ವಜನಿಕರು ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ.
ಹೈಕೋರ್ಟ್ ಆದೇಶದಂತೆ ಈಗಾಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದ್ದು, ಪಿ.ಒ.ಪಿ ವಿಗ್ರಹಗಳನ್ನು ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ವಿಂಗಡಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು.
ಗಣೇಶೋತ್ಸವ ಸಂದರ್ಭದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯ ತನಕ ಧ್ವನಿ ವರ್ಧಕಗಳ ಬಳಕೆಯನ್ನು ಹಾಗೂ ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಪಿಒಪಿ ಗಣಪತಿ ಬೇಡ
ಹೈಕೋರ್ಟ್ ಆದೇಶದಂತೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುತ್ತೋಲೆ ಅನ್ವಯ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ರಾಜ್ಯದ ಯಾವುದೇ ಕೆರೆ ಬಾವಿ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.