ADVERTISEMENT

ಮಾರ್ಗಸೂಚಿ ಪಾಲಿಸಿ: ಸರಳ ಗಣೇಶೋತ್ಸವ ಆಚರಿಸಿ

ಕೋವಿಡ್‌ ನಿಯಮಾವಳಿ ಕಡ್ಡಾಯ ಪಾಲಿಸಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 4:24 IST
Last Updated 8 ಸೆಪ್ಟೆಂಬರ್ 2021, 4:24 IST
ಎಂ.ಕೂರ್ಮಾರಾವ್, ಜಿಲ್ಲಾಧಿಕಾರಿ 
ಎಂ.ಕೂರ್ಮಾರಾವ್, ಜಿಲ್ಲಾಧಿಕಾರಿ    

ಉಡುಪಿ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.

ಮಂಗಳವಾರ ಗಣೇಶ ಚತುರ್ಥಿ ಆಚರಣೆಯ ಮಾರ್ಗಸೂಚಿ ಅನುಷ್ಠಾನ ಕುರಿತು ಅಧಿಕಾರಿಗಳ ಜತೆ ನಡೆದವರ್ಚುವಲ್ ಸಭೆಯಲ್ಲಿ ಮಾತನಾಡಿ, ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಗಣೇಶ ಚತುರ್ಥಿಯನ್ನು ಕೋವಿಡ್‌ ಮಾರ್ಗಸೂಚಿಯನ್ವಯ ಆಚರಿಸುವಂತೆ ಸೂಚನೆ ನೀಡಿದೆ. ಮಾರ್ಗಸೂಚಿ ಪಾಲನೆಯಲ್ಲಿ ಯಾವ ಗೊಂದಲಗಳು ಇರಬಾರದು. ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಸ್ಥಳೀಯಾಡಳಿಗಳು ಎಲ್ಲ ನಿಬಂದನೆಗಳ ಕುರಿತು ಆಯೋಜಕರಿಗೆ ಮನವರಿಕೆ ಮಾಡಬೇಕು ಎಂದರು.

ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶೋತ್ಸವ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರದ ಗಣಪತಿ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. 20ಕ್ಕಿಂತ ಹೆಚ್ಚು ಜನರು ಸೇರಬಾರದು. ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡಲು ಅವಕಾಶವಿಲ್ಲ. ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಕಾರ್ಯಕ್ರಮಳನ್ನು ಆಯೋಜನೆ ಮಾಡುವಂತಿಲ್ಲ. ಪರಿಸರಕ್ಕೆ ಹಾನಿಯಾಗದಂತೆ ಹಬ್ಬದ ಆಚರಣೆ ನಡೆಯಬೇಕು ಎಂದರು.

ADVERTISEMENT

ಆಯೋಜಕರು ಕೋವಿಡ್ ನೆಗೆಟಿವ್ ವರದಿ ಹಾಗೂ ಕೋವಿಡ್ ಲಸಿಕೆ ಪಡೆದಿರಬೇಕು. ಮಾರ್ಗಸೂಚಿಗಳ ಉಲ್ಲಂಘನೆ ನಡೆಯದಂತೆ ಆಯೋಜಕರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು. ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಸಾರ್ವಜನಿಕರು 6 ಅಡಿ ಅಂತರ ಕಾಪಾಡುವಂತೆ ಗುರುತುಗಳನ್ನು ಹಾಕಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿರುವಂತೆ ನೋಡಿಕೊಳ್ಳಬೇಕು. ಥರ್ಮಲ್ ಸ್ಕ್ಯಾನರ್ ಪರೀಕ್ಷೆ ಮಾಡುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಗಣೇಶೋತ್ಸವ ಮಂಡಳಿಗಳ ಮೂಲಕ ಕೋವಿಡ್ ನಿಯಂತ್ರಣ, ಲಸಿಕೆ ಹಾಕುವುದು, ಹಾಗೂ ಕೋವಿಡ್ ಪರೀಕ್ಷೆ ನಡೆಸುವುದರ ಬಗ್ಗೆ ಜಾಗೃತಿ ಹಾಗೂ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್ ಮಾತನಾಡಿ, ಗಣೇಶೋತ್ಸವ ಆಚರಣೆ ಸಂಬಂಧ ಪಿಡಿಒಗಳಿಗೆ ಸರ್ಕಾರದ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್‌ಪಿ ಕುಮಾರ ಚಂದ್ರ, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಪೆಡ್ನೆಕರ್, ತಹಸೀಲ್ದಾರ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.