
ಉಡುಪಿ: ಮಕ್ಕಳ ನ್ಯಾಯ ಒದಗಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪುನರ್ವಸತಿ ಕಾರ್ಯಕರ್ತರಿಗೆ ಸೋಮವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಕಾಯ್ದೆಗಳ ಬಗ್ಗೆ ಮಾಹಿತಿ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬೆಳೆಯುತ್ತಿರುವ ಮಕ್ಕಳ ಸಾಮಾಜಿಕ ಮತ್ತು ದೈಹಿಕ ಸ್ಥಿತಿಗತಿಗಳನ್ನು ಪರಿಗಣಿಸಿ ಅವರು ಎದುರಿಸುವ ಸಮಸ್ಯೆ, ತಲ್ಲಣ ಹಾಗೂ ಅವರ ದೈಹಿಕ ಮತ್ತು ಮಾನಸಿಕ ಅವಶ್ಯಕತೆಗಳ ಬಗ್ಗೆ ವಾಸ್ತವಿಕ ಅರಿವು ಹೊಂದಿ ಅವರ ಭವಿಷ್ಯವನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
ಭಿನ್ನ ಸಾಮರ್ಥ್ಯದ ಮಕ್ಕಳ ಆರೈಕೆ ಮತ್ತು ಅವರ ಅಗತ್ಯಗಳು ಸಾಮಾನ್ಯ ಮಕ್ಕಳಿಗಿಂತ ಹೆಚ್ಚಾಗಿರುತ್ತವೆ. ಜಿಲ್ಲೆಯಲ್ಲಿ 16,763 ಮಕ್ಕಳಿದ್ದು ಅದರಲ್ಲಿ ಸುಮಾರು 1500 ರಷ್ಟು ಭಿನ್ನ ಸಾಮರ್ಥ್ಯದ ಮಕ್ಕಳು ಇದ್ದಾರೆ ಎಂದು ವಿವರಿಸಿದರು.
ಇಂತಹ ಮಕ್ಕಳಿಗೆ ವಿಶೇಷ ಕಾಳಜಿಯ ಅಗತ್ಯವಿರುತ್ತದೆ. ಅವರ ಜೊತೆ ನೇರ ಸಂಪರ್ಕ ಹೊಂದಿರುವ ತಳಮಟ್ಟದ ಕಾರ್ಯಕರ್ತರು ಅವರ ಪುನರ್ವಸತಿಗೆ ಹೆಚ್ಚಿನ ಕಾಳಜಿ ವಹಿಸಿ ಅವರೂ ಕೂಡಾ ಸಾಮಾನ್ಯ ಮಕ್ಕಳಂತೆ ಗೌರವಯುತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ದೇಶದ ಸಂವಿಧಾನವು ಎಲ್ಲ ನಾಗರಿಕರಿಗೂ ಮೂಲಭೂತ ಹಕ್ಕುಗಳನ್ನು ನೀಡಿದೆ. ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಲಾಗದ ಸಮಾಜದ ದುರ್ಬಲ ವರ್ಗವಾದ ಮಕ್ಕಳ ಹಕ್ಕುಗಳ ರಕ್ಷಣೆ ಸಂವಿಧಾನ ಬದ್ದ ಕರ್ತವ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಮಕ್ಕಳು ಅತ್ಯಂತ ದುರ್ಬಲರಾಗಿರುವುದರಿಂದ ಅವರ ಹಕ್ಕುಗಳ ರಕ್ಷಣೆಯಲ್ಲಿ ಹೆಚ್ಚು ಸಂವೇದನಾಶೀಲರಾಗಿ ವ್ಯವಹರಿಸಬೇಕು ಎಂದು ತಿಳಿಸಿದರು.
ಕೊಪ್ಪಳ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಕೊಣಿಲ ರಾಘವೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಡಿವೈಎಸ್‌ಪಿ ಪ್ರಭು ಡಿ.ಟಿ., ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ರತ್ನಾ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿದರು. ಸುರಕ್ಷಾ ನಿರೂಪಿಸಿದರು.