ಉಡುಪಿ: ಜಿಎಸ್‌ಟಿ ಆದಾಯದಿಂದ ದೇಶದ ಜಿಡಿಪಿ ಏರಿಕೆಯಾಗುವುದರ ಜೊತೆಗೆ ವಿದೇಶಿ ಹೂಡಿಕೆದಾರರು ನಮ್ಮ ದೇಶದಲ್ಲಿ ಹೂಡಿಕೆ ಮಾಡುವುದರಿಂದ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ಜಿಲ್ಲಾ ಘಟಕವು ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಹಯೋಗದಲ್ಲಿ ಅಜ್ಜರಕಾಡಿನ ಡಯಾನ ಹೋಟೆಲ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮುಂದಿನ ಪೀಳಿಗೆಯ ಜಿಎಸ್‌ಟಿ 2.0’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಇಂದು ರಾಜಕೀಯ ಉದ್ದೇಶದಿಂದ ಜಿಎಸ್‌ಟಿ ಅನ್ನು ತೆಗಳುವ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿ ಕಾರ್ಯಕರ್ತರು ಜಿಎಸ್‌ಟಿ ಇಳಿಕೆಯಿಂದಾಗುವ ಪ್ರಯೋಜನಗಳ ಕುರಿತು ಜನರಿಗೆ ಮನವರಿಕೆ ಮಾಡಬೇಕಾಗಿದೆ ಎಂದರು.
ದೇಶದಲ್ಲಿ ಜಿಎಸ್‌ಟಿ ತೆರಿಗೆ ಪದ್ಧತಿ ಜಾರಿಗೆ ಬರುವ ಮೂಲಕ ಹರಿದು ಹಂಚಿ ಹೋಗಿದ್ದ ತೆರಿಗೆಗಳು ಏಕರೂಪಕ್ಕೆ ಬಂದಿದ್ದವು, ಇದೀಗ ಜಿಎಸ್‌ಟಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನಿಟ್ಟಿದೆ ಎಂದು ಅವರು ಹೇಳಿದರು.
ಜಿಎಸ್‌ಟಿ ಇಳಿಕೆಯಿಂದಾಗಿ ಕೇಂದ್ರ ಸರ್ಕಾರಕ್ಕೆ ₹48 ಸಾವಿರ ಕೋಟಿ ನಷ್ಟವಾದರೂ ಸರ್ಕಾರ ಜನರ ಹಿತ ದೃಷ್ಟಿಯಿಂದ ಇಂತಹ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಜಿಎಸ್‌ಟಿ ಇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ₹15 ಸಾವಿರ ಕೋಟಿ ನಷ್ಟ ಉಂಟಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇದು ಸುಳ್ಳು, ಜವಾಬ್ದಾರಿತ ಸ್ಥಾನದಲ್ಲಿರುವವರು ಇಂತಹ ಹೇಳಿಕೆ ನೀಡಿದರೆ ಜನರು ನಂಬುತ್ತಾರೆ. ನೈಜ ವಿಚಾರವನ್ನು ನಾವು ಜನರಿಗೆ ತಿಳಿಸಬೇಕಾಗಿದೆ ಎಂದರು.
ಬೆಂಗಳೂರಿನ ಅರ್ಥಶಾಸ್ತ್ರಜ್ಞ ವಿಶ್ವನಾಥ ಭಟ್ ಮಾತನಾಡಿ, ಕೇಂದ್ರ ಸರ್ಕಾರವು ಶೇ 99ರಷ್ಟು ಸರಕುಗಳ ಮೇಲಿನ ಜಿಎಸ್‌ಟಿಯನ್ನು ಇಳಿಕೆ ಮಾಡಿದೆ. ಸ್ವಾತಂತ್ರ್ಯಾ ನಂತರ ದೇಶ ಕಂಡ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೆಜ್ಜೆ ಇದಾಗಿದೆ ಎಂದು ಹೇಳಿದರು.
ಜಿಎಸ್‌ಟಿ ಇಳಿಕೆಯಿಂದಾಗಿ ವಿವಿಧ ವಸ್ತುಗಳ ದರ ಕಡಿಮೆಯಾಗಲಿದೆ. ಇದು ಜನರಿಗೆ ಹಣ ಉಳಿತಾಯ ಮಾಡಲು ಸಹಾಯಕವಾಗಲಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಅಮೀನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ದಿವಾಕರ ಶೆಟ್ಟಿ ಇದ್ದರು. ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.