ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್, ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೋಳ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಿತು
ಕಾರ್ಕಳ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಬೋಳ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಬ್ಲಾಕ್ ಕಾಂಗ್ರೆಸ್, ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ‘ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತೇವೆ’ ಎಂದ ಬಿಜೆಪಿ ಬೆಂಬಲಿತ ಸದಸ್ಯರ ಮಾತನ್ನು ಖಂಡಿಸಿ, ಇಂದು ಬೋಳ ಪಂಚಾಯಿತಿ ಕಚೇರಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇದೇ ಉದ್ಧಟತನ ತೋರಿದರೆ ನಿಮ್ಮ ಮನೆ ಬಾಗಿಲಿಗೆ ಬರಬೇಕಾದೀತು. ಬಿಜೆಪಿ ಬೆಂಬಲಿತ ಸದಸ್ಯರಿಗೆ ಸರ್ಕಾರದ ಗ್ಯಾರಂಟಿ ಯೋಜನೆ ಬೇಡವಾಗಿದ್ದರೆ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಜನರ ಜೀವನಮಟ್ಟ ಸುಧಾರಣೆಗಾಗಿ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾಳಜಿ ಗ್ಯಾರಂಟಿ ಯೋಜನೆಯಲ್ಲಿ ಅಡಕವಾಗಿದೆ ಎಂದರು.
ಬಿಜೆಪಿ ಆಡಳಿತದ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲ ಎಂದು ಅದೆಷ್ಟೋ ಬಡವರ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿತ್ತು. ಆದರೆ, ಕಾಂಗ್ರೆಸ್ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಮೂಲಕ ಉಚಿತ ವಿದ್ಯುತ್ ನೀಡುತ್ತಿದೆ. ಇಂದು ಗ್ಯಾರಂಟಿ ಯೋಜನೆಗಳಿಂದ ಬಡವರು ಮನೆಯಲ್ಲಿ ಬೆಳಕು ಕಾಣುವಂತಾಗಿದೆ. ಮುಂದಿನ ದಿನಗಳಲ್ಲಿ ಬೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್ ನಡೆಸಲಾಗುವುದು ಎಂದು
ಹೇಳಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಅವಿನಾಶ್ ಮಲ್ಲಿ ಬೋಳ ಮಾತನಾಡಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅನಿತಾ ಡಿಸೋಜ, ಸುಧಾಕರ ಶೆಟ್ಟಿ ಮುಡಾರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯೋಗೀಶ್ ಮೂಲ್ಯ, ಕಿಶೋರ್ ದೀಕ್ಷಿತ್ ದೇವಾಡಿಗ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಯುವ ಕಾಂಗ್ರೆಸ್ ಅಸೆಂಬ್ಲಿ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ಕಾಂತಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ. ಸುದರ್ಶನ್ ಬಂಗೇರ, ಚಂದ್ರಹಾಸ ಪುತ್ರನ್, ರೊನಾಲ್ಡ್ ಅಲ್ಫೊನ್ಸೊ, ಡೆನಿಸ್, ಗಣೇಶ್ ಮೂಲ್ಯ, ಸುರೇಶ್ ಮಸ್ಕರೇನಸ್, ಶಂಕರ ಮೂಲ್ಯ, ಗೀತಾ, ದೀಕ್ಷಿತ್ ಶೆಟ್ಟಿ, ದೀಪಕ್ ಶೆಟ್ಟಿ, ಹೇಮಂತ್ ಆಚಾರ್ಯ, ಕೆಡಿಪಿ ಸದಸ್ಯ ರುಕ್ಮಯ ಶೆಟ್ಟಿಗಾರ್ ಭಾಗವಹಿಸಿದ್ದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಗ್ರಾ.ಪಂ. ಸದಸ್ಯ ಯೋಗೀಶ್ ಮೂಲ್ಯ ವಂದಿಸಿದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.