
ಉಡುಪಿ: ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯ ಎಂದು ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಹೇಳಿದರು.
ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಶನಿವಾರ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂದಿನ ಯುವಜನತೆಯು ತಂಬಾಕು, ಮಾದಕ ದ್ರವ್ಯ ಸೇವನೆಯಂತಹ ದುಷ್ಚಟಗಳ ದಾಸರಾಗುತ್ತಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದಾರೆ. ವಯಸ್ಕರು ಜೀವನ ಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗೃಹರಕ್ಷಕರು ತಾವು ಕಾರ್ಯ ನಿರ್ವಹಿಸುವ ಹಳ್ಳಿಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಂಡು ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್.ನಾಯ್ಕ್ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಅವರ ಕಾರ್ಯ ಇತರರಿಗೂ ಮಾದರಿಯಾಗಲಿ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗೃಹರಕ್ಷಕರಾದ ಶಶಿಕಿರಣ್, ಅನಿಲ್ ಥಾಮಸ್, ಜಯಂತಿ, ಸಂಧ್ಯಾ, ಲತಾ ಮತ್ತು ದಿನೇಶ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ರತ್ನಾಕರ್ ಸನ್ಮಾನಿತರ ವಿವರ ವಾಚಿಸಿದರು. ಬ್ರಹ್ಮಾವರ ಘಟಕ ಪ್ಲಾಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಲೂವಿಸ್ ನಿರೂಪಿಸಿದರು. ಪ್ರಭಾಕರ್ ಸುವರ್ಣ ವಂದಿಸಿದರು.