ADVERTISEMENT

‘ಹಕ್ಕು, ಕರ್ತವ್ಯ ಸಮಾನವಾಗಿ ಕಾಣಿ’

ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಕಿರಣ್ ಎಸ್. ಗಂಗಣ್ಣವರ್ ಸಲಹೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 4:08 IST
Last Updated 11 ಡಿಸೆಂಬರ್ 2025, 4:08 IST
ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಜರುಗಿತು
ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಜರುಗಿತು   

ಉಡುಪಿ: ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ನೋಡುವ ಮನೋಭಾವವನ್ನು ಎಲ್ಲರೂ ಹೊಂದಿದರೆ ಮಾತ್ರ ನಮ್ಮ ನಾಗರಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಉಳಿಯಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಮಾನವ ಹಕ್ಕುಗಳ ಸಂಘ ಮತ್ತು ಐಕ್ಯುಎಸಿ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್‌ ಬಿ.ವೈ. ಮಾತನಾಡಿ, ಮಾನವ ಹಕ್ಕುಗಳು ಇಂದು ನಮ್ಮ ದೈನಂದಿನ ಅಗತ್ಯತೆಗಳಾಗಿವೆ. ನಾವು ನಮ್ಮ ಹಕ್ಕುಗಳ ಜೊತೆಗೆ ಇತರರ ಹಕ್ಕುಗಳನ್ನು ಅರಿತು ಗೌರವಿಸಿ ಬದುಕುವುದನ್ನು ಕಲಿಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಲ್ ಮಾತನಾಡಿ, ಮಾನವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಸಮಾಜದಲ್ಲಿ ಎಲ್ಲರು ಒಬ್ಬರಿಗೊಬ್ಬರು ಸಮಾನರು. ಇಲ್ಲಿ ಯಾವುದೇ ತಾರತಮ್ಯಗಳಿಗೆ ಅವಕಾಶ ಮಾಡಿ ಕೊಡಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುರತ್ಕಲ್‌ನ ಗೋವಿಂದ ದಾಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಆಶಾಲತಾ ಪಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರಾಮುಖ್ಯತೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ. ಮತ್ತು ಐಕ್ಯುಎಸಿ ಸಂಚಾಲಕಿ ಶ್ರೀಮತಿ ಅಡಿಗ ಉಪಸ್ಥಿತರಿದ್ದರು.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಂದ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.